ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ
ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು ದೀರ್ಘ ಕಾಲದ ಅನಾರೋಗ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಅವರ ಹುಟ್ಟೂರಾದ ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ್ದರು. ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್ ತಹಶೀಲ್ದಾರ್ 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.
ಮನೋಹರ್ ತಹಶೀಲ್ದಾರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಹಾನಗಲ್ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ಬಿಜೆಪಿ ಸೇರಿದ್ದ ಅವರು, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ್ದರು. ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿದ್ದು, ಮಾಜಿ ಸಚಿವರಾದ ಮನೋಹರ ತಹಶೀಲ್ದಾರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮನೋಹರ ತಹಶೀಲ್ದಾರ್ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬವರ್ಗ ಮತ್ತು ಬಂಧು ಮಿತ್ರರಿಗೆ ನನ್ನ ಸಂತಾಪಗಳು ಎಂದು ಪೋಸ್ಟ್ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್ ಮಾಡಿ, ಮಾಜಿ ಸಚಿವರಾದ ಶ್ರೀ ಮನೋಹರ್ ತಹಶೀಲ್ದಾರ್ ಅವರ ನಿಧನಕ್ಕೆ ಸಂತಾಪ ಕೋರುವೆ. ಹಾನಗಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಆರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ಬಿಜೆಪಿ ಸೇರಿ, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ್ದರು. ಮನೋಹರ್ ತಹಶೀಲ್ದಾರ್ ಅವರ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿ ದೊರೆಯಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪೋಸ್ಟ್ ಮಾಡಿದ್ದಾರೆ.
ಗುರುವಾರ ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರನ್ನು ಮನೋಹರ್ ತಹಶೀಲ್ದಾರ್ ಅಗಲಿದ್ದಾರೆ.