Namma Metro | ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ನಮ್ಮ ಮೆಟ್ರೋ ವಿಸ್ತರಣೆ: ಡಿಕೆ ಶಿವಕುಮಾರ್
ಬೆಂಗಳೂರಿನ ವಿವಿಧ ಭಾಗದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಮೆಟ್ರೋ ಸಮಾಲೋಚನೆ ನಡೆಸುತ್ತಿವೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಬೆಂಗಳೂರು ಸುತ್ತಮುತ್ತಿನ ಪ್ರದೇಶಗಳಾದ ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿಗೆ ʻನಮ್ಮ ಮೆಟ್ರೋʼ ವಿಸ್ತರಿಸುವ ಬಗ್ಗೆ ಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ನಡೆದ ಅಧಿವೇಶನದಲ್ಲಿ ಕೃಷ್ಣರಾಜಪುರ ಹಾಗೂ ಹಳೇ ಮದ್ರಾಸ್ ರಸ್ತೆಯಲ್ಲಿ ಆಗುತ್ತಿರುವ ವಿಪರೀತ ಟ್ರಾಫಿಕ್ ಜಾಮ್‌ನ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಅವರು ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಡಿ.ಕೆ ಶಿವಕುಮಾರ್ ಅವರು ಉತ್ತರಿಸಿ ಬೆಂಗಳೂರಿನ ವಿವಿಧ ಭಾಗಕ್ಕೆ ಮೆಟ್ರೋ ವಿಸ್ತರಣೆ ಮಾಡುವ ಬಗ್ಗೆ ಅವರು ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಹಳೆಯ ಮದ್ರಾಸ್ ರಸ್ತೆಯಲ್ಲಿ ಅದರಲ್ಲಿಯೂ ಮುಖ್ಯವಾಗಿ ಕೃಷೃರಾಜಪುರದಿಂದ ಹೊಸಕೋಟೆಯ ವರೆಗೆ ಟ್ರಾಫಿಕ್ ಜಾಮ್ ಸಮಸ್ಯೆ ಇದೆ. ಇದನ್ನು ಶರತ್ ಬಚ್ಚೇಗೌಡ ಅವರು ಸದನದಲ್ಲಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ವಿವಿಧ ಭಾಗದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಇರುವ ಬಗ್ಗೆ ಮಾಹಿತಿ ಇದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ಮೆಟ್ರೋ ಸಮಾಲೋಚನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.
ಬೆಂಗಳೂರು ಮೆಟ್ರೋ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಚರ್ಚೆಗಳು ಈಗಾಗಲೇ ಶುರುವಾಗಿದೆ. ಕೋಲಾರದಿಂದ ಅಂದಾಜು 10,000 ಸಾವಿರಕ್ಕೂ ಹೆಚ್ಚು ಜನ ಬೆಂಗಳೂರಿಗೆ ರೈಲುಗಳಲ್ಲಿ ಬರುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.