ರಾಜ್ಯದ ಎಲ್ಲ ಜಿಲ್ಲೆಗಳಿಗೆ ವ್ಯಾಪಿಸಿದ ಗ್ರಾಮ ಪಂಚಾಯ್ತಿ ಸಿಬ್ಬಂದಿಯ ಧರಣಿ
ಗ್ರಾಮ ಪಂಚಾಯ್ತಿ ಸಿಬ್ಬಂದಿಯ ಮುಷ್ಕರದ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಮೂರು ದಿನಗಳಿಂದ ಸರ್ಕಾರಿ ಸೇವೆಗಳು ಸಂಪೂರ್ಣ ಬಂದ್ ಆಗಿವೆ. ವಿವಿಧ ಕೆಲಸಗಳಿಗಾಗಿ ಗ್ರಾಮ ಪಂಚಾಯ್ತಿಗೆ ಬರುವ ಸಾರ್ವಜನಿಕರು ಮುಷ್ಕರದ ವಿಷಯ ತಿಳಿದು ಬರಿಗೈಲಿ ವಾಪಸಾಗುತ್ತಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರು ಹಾಗೂ ಸಿಬ್ಬಂದಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದೆರಡು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರವು ಸೋಮವಾರದಿಂದ(ಅ.7) ರಾಜ್ಯದ ಎಲ್ಲ ಜಿಲ್ಲೆಗಳಿಗೆ ವ್ಯಾಪಿಸಿದೆ.
ಗ್ರಾಮ ಪಂಚಾಯ್ತಿ ಸಿಬ್ಬಂದಿಯ ಮುಷ್ಕರದ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಮೂರು ದಿನಗಳಿಂದ ಸರ್ಕಾರಿ ಸೇವೆಗಳು ಸಂಪೂರ್ಣ ಬಂದ್ ಆಗಿವೆ. ವಿವಿಧ ಕೆಲಸಗಳಿಗಾಗಿ ಗ್ರಾಮ ಪಂಚಾಯ್ತಿಗೆ ಬರುವ ಸಾರ್ವಜನಿಕರು ಮುಷ್ಕರದ ವಿಷಯ ತಿಳಿದು ಬರಿಗೈಲಿ ವಾಪಸಾಗುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳ ಮೂಲಕ ಸರ್ಕಾರವು ಸುಮಾರು ನಲವತ್ತಕ್ಕೂ ಹೆಚ್ಚು ಸೇವೆಗಳನ್ನು ಒದಗಿಸುತ್ತಿದೆ. ಮುಷ್ಕರದ ಪರಿಣಾಮ ಈಗ ಸಾರ್ವಜನಿಕರಿಗೆ ಈ ಯಾವ ಸೇವೆಗಳು ಲಭ್ಯವಾಗುತ್ತಿಲ್ಲ.
ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕೇವಲ ಎರಡು ದಿನದ ಮುಷ್ಕರಕ್ಕೆ ಮಾತ್ರ ಪೊಲೀಸರು ಅನುಮತಿ ನೀಡಿದ್ದರು. ಹೀಗಾಗಿ ಸೋಮವಾರದಿಂದ (ಅ.7) ಜಿಲ್ಲಾಮಟ್ಟದಲ್ಲಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಧರಣಿ ಸ್ಥಳಕ್ಕೆ ಗ್ರಾಮೀಣಾಭೀವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್ ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ. ಆದರೆ, ಯಾವುದೇ ಭರವಸೆ ನೀಡದ ಹಿನ್ನೆಲೆಯಲ್ಲಿ ಧರಣಿ ಮುಂದುವರಿಸುತ್ತಿದ್ದೇವೆ ಎಂದು ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ.
ಅ.10 ರಂದು ಮಾತುಕತೆಗೆ ಆಹ್ವಾನ
ಗ್ರಾಮ ಪಂಚಾಯ್ತಿ ಸಿಬ್ಬಂದಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಅ.10 ರಂದು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತುಕತೆಗೆ ಆಹ್ವಾನಿಸಿದ್ದಾರೆ.
ಸರ್ಕಾರದಿಂದ ನಮ್ಮ ಬೇಡಿಕೆಗಳ ಈಡೇರಿಕೆ ಕುರಿತು ಸ್ಪಷ್ಟ ಆದೇಶ ಬರುವತನಕ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿಗಳ ಮುಂದೆ ಪ್ರತಿಭಟನೆ ಮಾಡುವುದು ಶತಸಿದ್ಧ ಎಂದು ಸಂಘದ ಅಧ್ಯಕ್ಷ ರಾಜು ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಬಿ ಗ್ರೂಪ್ಗೆ ಸೇರ್ಪಡೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮ ಪಂಚಾಯ್ತಿ ಸಿಬ್ಬಂದಿ ಧರಣಿ ನಡೆಸುತ್ತಿದ್ದಾರೆ.