
ಬೆಂಗಳೂರು: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ
ಶಾರ್ಟ್ ಸ್ರಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲೇ ದಿಢೀರ್ ಹೊತ್ತಿ ಉರಿದ ಘಟನೆ ನಗರದ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಯಶವಂತಪುರ ಕಡೆಯಿಂದ ಮಲ್ಲೇಶ್ವರಂ ಸರ್ಕಲ್‌ನ ಮಾರಮ್ಮ ದೇವಸ್ಥಾನದ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಕಾರು ಚಲಿಸುತ್ತಿದ್ದಂತೆಯೇ ಮುಂಭಾಗದ ಎಂಜಿನ್ ಭಾಗದಿಂದ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಅಪಾಯದ ಮುನ್ಸೂಚನೆ ಅರಿತ ಚಾಲಕ, ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕೆಳಗೆ ಇಳಿದಿದ್ದಾರೆ.
ಚಾಲಕ ಕಾರಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆ ಕಾರನ್ನು ಆವರಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಧಾವಿಸಿ, ಅಗ್ನಿಶಾಮಕ ಸಿಲಿಂಡರ್‌ಗಳ ಸಹಾಯದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಶಾರ್ಟ್ ಸ್ರಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳಪಿನ ಜಾವದ ಸಮಯವಾಗಿದ್ದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆಯಿತ್ತು, ಹೀಗಾಗಿ ಸಂಚಾರಕ್ಕೆ ಹೆಚ್ಚಿನ ಅಡಚಣೆ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

