
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣ ಅವರನ್ನು ಬರಮಾಡಿಕೊಂಡ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ; ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆಯಲ್ಲಿ ಭಾಗಿ
ಬೆಂಗಳೂರಿನ ಸಿಎಂಆರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಜತ ಮಹೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು.
ತುಮಕೂರಿನ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಹಾಗೂ ಬೆಂಗಳೂರಿನ ಸಿಎಂಆರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ವಾಯುಸೇನೆ ವಿಶೇಷ ವಿಮಾನದ ಮೂಲಕ ಆಗಮಿಸಿದರು.
ಬುಧವಾರ (ಜ.21) ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ ಉಪರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬರಮಾಡಿಕೊಂಡರು. ಈ ವೇಳೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣಿಸಿದರು.
ಸಿದ್ಧಗಂಗಾ ಮಠದಲ್ಲಿ ಬಿಗಿ ಬಂದೋಬಸ್ತ್ ಕುರಿತು ಸಲಹೆ ನೀಡುತ್ತಿರುವ ಅಧಿಕಾರಿಗಳು
ಸಿದ್ಧಗಂಗಾ ಮಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಉಪ ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇನ್ನು ಮಠದಲ್ಲಿ ಬೆಳಿಗ್ಗೆ 5 ಗಂಟೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ನಡೆದಿವೆ.
ಶಿವಕುಮಾರ ಶ್ರೀಗಳ ಗದ್ದಿಗೆಗೆ ಮಂತ್ರಘೋಷಗಳ ಮೂಲಕ ವಿಶೇಷ ಪೂಜೆ ನಡೆದಿದ್ದು, ಬೆಳಿಗ್ಗೆ 8 ಗಂಟೆಗೆ ಶಿವಕುಮಾರ ಶ್ರೀಗಳ ಪುತ್ಥಳಿಯನ್ನು ರುದ್ರಾಕ್ಷಿ ಮಂಟಪದಲ್ಲಿ ಮೆರವಣಿಗೆ ಮಾಡಲಾಗಿದೆ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಮದ್ದೇನಹಳ್ಳಿ ಸತ್ಯ ಸಾಯಿ ಆಶ್ರಮದ ಸದ್ಗುರು ಮಧುಸೂದನ ಸಾಯಿ, ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

