ಮನೆಕೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ | ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು
ಜೆಡಿಎಸ್ ನಾಯಕ ಹಾಗೂ ಶಾಸಕ ಎಚ್ ಡಿ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ.
ಅಡುಗೆ ಕೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ(ಮೇ 20) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಐದು ಲಕ್ಷ ಮೊತ್ತದ ಬಾಂಡ್ ಮತ್ತು ಅಷ್ಟೇ ಮೊತ್ತದ ಮತ್ತೊಬ್ಬರ ಭದ್ರತೆ ಸೇರಿದಂತೆ ವಿವಿಧ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್ ಆದೇಶ ನೀಡಿದ್ದಾರೆ.
ಈ ಮೊದಲು ಇದೇ ನ್ಯಾಯಾಲಯ ಈ ಪ್ರಕರಣದಲ್ಲಿ ನೀಡಿದ್ದ ಮಧ್ಯಂತರ ಜಾಮೀನಿಗೆ ಎಸ್ಐಟಿ ಪರ ವಕೀಲರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಜಾಮೀನು ಅರ್ಜಿ ವಿಚಾರಣೆಗೆ ಅರ್ಹವೋ ಅಲ್ಲವೋ ಎಂಬ ಬಗ್ಗೆಯೂ ಆಕ್ಷೇಪವಿತ್ತು. ಆ ಹಿನ್ನೆಲೆಯಲ್ಲಿ ಪರ ವಿರೋಧ ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ಸೋಮವಾರಕ್ಕೆ ಆದೇಶ ಕಾಯ್ದಿರಿಸಿತ್ತು.