ಸಕಲೇಶಪುರ| ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಮಹಿಳೆ ಬಲಿ
x
ಆನೆ ದಾಳಿಗೆ ಮೃತಪಟ್ಟ ಮಹಿಳೆ ಶೋಭಾ

ಸಕಲೇಶಪುರ| ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕ ಮಹಿಳೆ ಬಲಿ

ಮಂಗಳವಾರ ಮುಂಜಾನೆ ತನ್ನ ತಾಯಿ ಮತ್ತು ತಂಗಿಯೊಂದಿಗೆ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸದಲ್ಲಿದ್ದಾಗ ಏಕಾಏಕಿ ಆನೆ ದಾಳಿ ಮಾಡಿದೆ. ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Click the Play button to hear this message in audio format

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶೋಭಾ (40) ಎಂದು ಗುರುತಿಸಲಾಗಿದೆ.

ಮಂಗಳವಾರ ಮುಂಜಾನೆ ಶೋಭಾ ಅವರು ತಮ್ಮ ತಾಯಿ ರಾಜಮ್ಮ ಹಾಗೂ ಸಹೋದರಿ ರಾಗಿಣಿ ಅವರೊಂದಿಗೆ ಗ್ರಾಮದ ಸಮೀಪದ ಕಾಫಿ ತೋಟದಲ್ಲಿ ಮರಗಳಿಗೆ ಸುಣ್ಣ ಹಚ್ಚುವ ಕೆಲಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಪ್ರತ್ಯಕ್ಷವಾದ ಕಾಡಾನೆ ಇವರ ಮೇಲೆರಗಿದೆ. ಆನೆಯಿಂದ ತಪ್ಪಿಸಿಕೊಳ್ಳಲು ಮೂವರೂ ದಿಕ್ಕಾಪಾಲಾಗಿ ಓಡಿದ್ದಾರೆ. ಆದರೆ, ಶೋಭಾ ಅವರನ್ನು ಬೆನ್ನಟ್ಟಿದ ಸಲಗ ಅವರ ಮೇಲೆ ದಾಳಿ ನಡೆಸಿ, ಕಾಲುಗಳಿಂದ ತುಳಿದು ಸಾಯಿಸಿದೆ. ತಾಯಿ ಮತ್ತು ತಂಗಿ ಕಣ್ಣೆದುರೇ ಶೋಭಾ ಅವರು ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಆದರೆ, ಇಲಾಖೆಯ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಮೃತದೇಹವನ್ನು ಎತ್ತಲು ಬಿಡದೆ ಧರಣಿ ನಡೆಸಿದರು. ಕಾಡಾನೆಗಳ ಸಂಚಾರದ ಬಗ್ಗೆ ಇಲಾಖೆಯು ಮುಂಚಿತವಾಗಿ ಯಾವುದೇ ಎಚ್ಚರಿಕೆ ನೀಡುತ್ತಿಲ್ಲ ಮತ್ತು ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯದಲ್ಲಿ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಪರಿಹಾರದ ಹಣ ನೀಡುವುದು ನಮಗೆ ಬೇಡ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಹಾಗೂ ಡಿಎಫ್‌ಒ ಸೌರಭ್ ಕುಮಾರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸ್ಥಳಕ್ಕೆ ಆಗಮಿಸಿ ಜನರನ್ನು ಮನವೊಲಿಸುವ ಪ್ರಯತ್ನ ನಡೆಸಿದರು. ಈ ವೇಳೆ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಕಾಡಾನೆಗಳನ್ನು ಸಂಪೂರ್ಣವಾಗಿ ಸ್ಥಳಾಂತರಿಸುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಳೆದ ಕೆಲವು ವರ್ಷಗಳಿಂದ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದರೂ ಸರ್ಕಾರ ಮತ್ತು ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಶ್ವತ ಪರಿಹಾರ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಮೋಗಲಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

Read More
Next Story