
ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಯುವಕರು ದುರ್ಮರಣ
ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳಾದ ಇರ್ಫಾನ್ (25), ತರುಣ್ (26) ಮತ್ತು ರೇವಂತ್ (27) ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಿಂದ ಮೂವರು ಯುವಕರು ಮೃತಪಟ್ಟಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಈ ದುರ್ಘಟನೆಯಲ್ಲಿ ಸಾವಿಗೀಡಾಗಿದ್ದಾರೆ.
ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳಾದ ಇರ್ಫಾನ್ (25), ತರುಣ್ (26) ಮತ್ತು ರೇವಂತ್ (27) ಎಂದು ಗುರುತಿಸಲಾಗಿದೆ. ಹಾಸನದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ಗೆ, ಮೈಸೂರು ಕಡೆಯಿಂದ ಬರುತ್ತಿದ್ದ ಯುವಕರ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಹಳ್ಳಿಮೈಸೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದ ಇತರೆಡೆ ನಡೆದ ಅಪಘಾತಗಳು
ನಗರದ ಹೀರಾಪುರ ಬಳಿ ನಡೆದ ಬೈಕ್ ಅಪಘಾತದಲ್ಲಿ ಫೈಜಲ್ ರೆಹಮಾನ್ (15) ಎಂಬ ಬಾಲಕ ಮೃತಪಟ್ಟಿದ್ದಾನೆ. ಟ್ಯೂಷನ್‌ಗೆ ಹೋಗುತ್ತಿದ್ದಾಗ ತಲೆಯಿಂದ ಬಿದ್ದ ಟೋಪಿಯನ್ನು ತೆಗೆದುಕೊಳ್ಳಲು ಮುಂದಾದಾಗ, ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಘಟನೆಯಲ್ಲಿ, ಟಂಟಂ ಪಲ್ಟಿಯಾದ ಪರಿಣಾಮ ಅನ್ಸರಸಾಬ್ ಅಲಿಯಾಸ್ ಅನ್ಸರ್ ಅಲಿ ಎಂಬುವವರು ಮೃತಪಟ್ಟಿದ್ದಾರೆ. ಹಾಗರಗಾ ಕ್ರಾಸ್ ಬಳಿ ಟಂಟಂ ಹತ್ತಿ ಗ್ರಾಮಕ್ಕೆ ಮರಳುತ್ತಿದ್ದಾಗ ವಾಹನ ಪಲ್ಟಿಯಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.