ಅನ್ನಭಾಗ್ಯ ಹಣ ಇನ್ನೂಕೊಡದ ಸಿದ್ದರಾಮಯ್ಯ ಸರ್ಕಾರ: ಎಚ್‌ಡಿಕೆ
x

ಅನ್ನಭಾಗ್ಯ ಹಣ ಇನ್ನೂಕೊಡದ ಸಿದ್ದರಾಮಯ್ಯ ಸರ್ಕಾರ: ಎಚ್‌ಡಿಕೆ


ಗ್ಯಾರಂಟಿಗಳಿಂದ ಜನರನ್ನು ಉದ್ಧಾರ ಮಾಡುತ್ತೇವೆ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಅನ್ನಭಾಗ್ಯದ 175 ರೂಪಾಯಿ ಹಣ ಕೊಡುವ ಯೋಗ್ಯತೆ ಇಲ್ಲ. ಎರಡು ಮೂರು ತಿಂಗಳಿಂದ ಇವರಿಂದ ಹಣ ಕೊಡಲು ಆಗಿಲ್ಲ, ಯಾವ ಕುಟುಂಬಕ್ಕೂ ಹಣ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಧಾನಪರಿಷತ್‌ ಚುನಾವಣೆ ಸಂಬಂಧ ಬಿಜೆಪಿ ನಾಯಕರ ಜತೆ ಸಭೆಯಲ್ಲ ಮಾತನಾಡಿದ ಅವರು, ಈ ಸರ್ಕಾರ ಹಾಲು ಉತ್ಪಾದಕರ ಸಹಾಯಧನ ಕೊಟ್ಟಿಲ್ಲ, ಮಳೆ ಬರುತ್ತಿದೆ, ಬಿತ್ತನೆ ಬೀಜ ದುಬಾರಿ ಆಗಿದೆ. ಬಿತ್ತನೆ ಬೀಜದ ಬೆಲೆ 75% ಏರಿಸಿದ್ದಾರೆ. ಹಳೆಯ ಪಿಂಚಣಿ ಯೋಜನೆಯ ಬಗ್ಗೆ ಇವರು ಸುಳ್ಳು ಹೇಳುತ್ತಿದ್ದಾರೆ. ಹೊಸ ಪಿಂಚಣಿ ಯೋಜನೆ ಜಾರಿಗೆ ತಂದಿದ್ದು ಮನಮೋಹನ್ ಸಿಂಗ್ ಸರಕಾರ ಎಂದು ಕಾಂಗ್ರೆಸ್ ಮೇಲೆ ಟೀಕಾ ಪ್ರಹಾರ ನಡೆಸಿದರು.

ರಾಜ್ಯದಲ್ಲಿ 2.75 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಖಾಲಿ ಇರುವ 30 ಲಕ್ಷ ಸರಕಾರಿ ಹುದ್ದೆ ತುಂಬುತ್ತಾರಂತೆ! ಮೊದಲು ಕರ್ನಾಟಕದಲ್ಲಿ ಭರ್ತಿ ಮಾಡಿ, ಆಮೇಲೆ ದೇಶದ ಕಥೆ ನೋಡೋಣ ಎಂದರು ಕುಮಾರಸ್ವಾಮಿ.

ಪರಿಷತ್‌ ಚುನಾವಣೆ

ಔವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್, ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಅಲ್ಲ, ಲೂಟಿ ಬೆಂಗಳೂರು

ಬೆಂಗಳೂರು ಜನರು ಗಮನಿಸಬೇಕು. ಈ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ನಿಗಾ ಇಡಬೇಕು. ಹೋದ ವರ್ಷವೂ ಮಳೆ ಬಂತು, ಮನೆಗಳಿಗೆ ನೀರು ನುಗ್ಗಿತು. ಈ ವರ್ಷವೂ ಮಳೆ ಬಂತು. ಮನೆಗಳಿಗೆ ನೀರು ನುಗ್ಗಿದೆ. ಜನರು ಮನೆ ಖಾಲಿ ಮಾಡಿ ಹೋಟೆಲ್ ಗಳಲ್ಲಿ ವಾಸ ಮಾಡುತ್ತಿದ್ದಾರೆ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ, ಲೂಟಿ ಬೆಂಗಳೂರು ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಮೊನ್ನೆ ಯಾವತ್ತೊ ಬಿಡಿಎ ಕಚೇರಿಯಲ್ಲಿ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರೆ. ಏನಕ್ಕೆ ಆ ಸಭೆ? ಲೂಟಿ ಹೊಡೆಯೋದಕ್ಕಾ? ಬೆಂಗಳೂರು ನಗರದ ಅಭಿವೃದ್ಧಿ ಹಿಮ್ಮುಖವಾಗಿ ಚಲಿಸುತ್ತಿದೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಕಾಮಗಾರಿ ಬೆಂಗಳೂರಿನಲ್ಲಿ ಆಗಿಲ್ಲ. ಅಭಿವೃದ್ಧಿ ಕೆಲಸ ನಿಂತು ಹೋಗಿದೆ. ಗ್ಯಾರಂಟಿಗಳ ಮಾತ್ರ ಕಡೆ ಗಮನ ಕೊಟ್ಟು ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದರು.

Read More
Next Story