
Heavy Rain|ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಕರಾವಳಿ ಮತ್ತು ಮಲೆನಾಡಿಗೆ ರೆಡ್ ಅಲರ್ಟ್
ಮೇ 22.ರಿಂದ 27ರ ತನಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಮೇ 22 ರಿಂದ 27 ರವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಕರಾವಳಿ ಮತ್ತು ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದು (ಮೇ 22) ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ಮೇ 23 ಮತ್ತು 24 ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇತರೆ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮೀಣ ಮತ್ತು ನಗರ), ಬೀದರ್, ವಿಜಯಪುರ, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಗುಡುಗು ಮಿಂಚಿನೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಭಾರೀ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆಯಿದ್ದರೆ, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಸುರಕ್ಷಿತವಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.