ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
x

ಭಾರೀ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಕೊಡಗಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಭಾರೀ ಮಳೆಯಾಗುವ ಸೂಚನೆ ಇದ್ದು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.


ರಾಜ್ಯದಲ್ಲಿ 2-3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ 12 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

12 ಜಿಲ್ಲೆಗಳಿಗೆ ಭಾರೀ ಮಳೆ ಅಲರ್ಟ್​

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಬಾಗಲಕೋಟೆ, ಧಾರವಾಡ, ಗದಗ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆಯನ್ನು ಹವಾಮಾನ‌ ಇಲಾಖೆ ನೀಡಿದೆ.

ಕೊಡಗಿನ ಶಾಲಾ-ಕಾಲೇಜಿಗೆ ರಜೆ

ಕೊಡಗಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಭಾರೀ ಮಳೆಯಾಗುವ ಸೂಚನೆ ಇದ್ದು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟ್‌ ರಾಜ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 50 ಕಿ.ಮೀ. ವರೆಗೆ ತಲುಪಬಹುದು. ಹಗಲಿನ ತಾಪಮಾನ 27°C ಮತ್ತು ರಾತ್ರಿಯ ತಾಪಮಾನ 20°C ಆಸುಪಾಸಿನಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತುಂಗಭದ್ರಾ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರು ಮತ್ತು ಭದ್ರಾ ಡ್ಯಾಂನಿಂದ 33 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಇದರಿಂದ ನದಿ ಪಾತ್ರದಲ್ಲಿರುವ ಗ್ರಾಮಗಳಿಗೆ ಪ್ರವಾಹದ ಅಪಾಯವಿರುವುದರಿಂದ, ಸ್ಥಳೀಯ ಪ್ರಶಾಸನ ಇಲಾಖೆಯು ಜನರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದೆ.

Read More
Next Story