
Heavy Rain | ಕರಾವಳಿ, ಮಲೆನಾಡು ಸೇರಿ 6 ಜಿಲ್ಲೆಗಳಲ್ಲಿ ಭಾರೀ ಮಳೆ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಯು ಮಂಗಳೂರು-ಬಂಟ್ವಾಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಎಡೆಬಿಡದೆ ಭಾರೀ ಮಳೆಯಾಗುತ್ತಿದ್ದು, ಇನ್ನು 5 ದಿನಗಳ ಕಾಲ ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಿದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಗಳು ಮಂಗಳೂರು-ಬಂಟ್ವಾಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಮಂಗಳೂರು ಹಾಗೂ ಬಂಟ್ವಾಳ ತಾಲೂಕಿನ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.
ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯುವ ಕುರಿತು ಎಚ್ಚರದಿಂದಿರಬೇಕು ಎಂದು ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರಿನ ಮೋಡ ಕವಿದ ವಾತಾವರಣ ಇದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 30-40 ಕಿ.ಮೀ ನೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.