ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ ಹಾಗೂ ಮಲೆನಾಡಿನಲ್ಲಿ ಭೂಕುಸಿತ ಸಾಧ್ಯತೆ
x
ಮಳೆ - ಭೂಕುಸಿತ (ಚಿತ್ರಕೃಪೆ - Pexels)

ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ ಹಾಗೂ ಮಲೆನಾಡಿನಲ್ಲಿ ಭೂಕುಸಿತ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಹಾಗೂ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಸಹ ಘೋಷಿಸಲಾಗಿದೆ.


ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಪಶ್ಚಿಮ ಘಟ್ಟದ ಭಾಗದಲ್ಲಿ ಭಾರೀ ಮಳೆಯಾಗುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ʻರಾಜ್ಯದ ಕರಾವಳಿ ಭಾಗದಲ್ಲಿ ಹಾಗೂ ಮಲೆನಾಡಿನ ಭಾಗದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆʼ ಎಂದು ಭಾರತೀಯ ಹವಾಮಾನ (Indian Meteorological Department) ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ತಿಳಿಸಿದ್ದಾರೆ.

ದ ಫೆಡರಲ್ ಕರ್ನಾಟಕದೊಂದಿಗೆ ಮಾತನಾಡಿದ ಅವರು, ʻರಾಜ್ಯದಲ್ಲಿ ಮುಂದಿನ ಒಂದು ವಾರ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಭಾರೀ ಮಳೆಯಿಂದಾಗಿ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭೂಕುಸಿತ ಎಚ್ಚರಿಕೆ ನೀಡಲಾಗಿದೆʼ ಎಂದರು.

ಭೂಕುಸಿತಕ್ಕೆ ಕಾರಣವೇನು ?

ಮಲೆನಾಡು ಭಾಗದಲ್ಲಿ ಹಾಗೂ ಬೆಟ್ಟ – ಗುಡ್ಡಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಸಾಮಾನ್ಯವಾಗಿ ಭಾರೀ ಮಳೆಯಾದರೆ, ಭೂಕುಸಿತ ಸೃಷ್ಟಿಯಾಗುತ್ತದೆ. ಇಲ್ಲಿ ಕಾಮಗಾರಿಗಳನ್ನು ನಡೆಸುವುದರಿಂದಲೂ ಭೂಕುಸಿತದ ಸಾಧ್ಯತೆ ಹೆಚ್ಚಾಗಿರುತ್ತದೆʼ ಎಂದು ಹಿರಿಯ ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ದ ಫೆಡರಲ್ ಕರ್ನಾಟಕದೊಂದಿಗೆ ಮಾತನಾಡಿದ ಅವರು, ʻವೈಜ್ಞಾನಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದರೆ, ಭೂಕುಸಿತ ಉಂಟಾಗುವ ಸಾಧ್ಯತೆ ತುಂಬಾ ವಿರಳ. ಆದರೆ, ಬೆಟ್ಟ ಗುಡ್ಡಗಳನ್ನು ನಿರ್ದಿಷ್ಟ ಪ್ರಮಾಣದಲ್ಲಿ ಕಡಿದು (ಅಗೆದು) ಕಾಮಗಾರಿ ಪ್ರಾರಂಭಿಸದಿದ್ದರೆ, ಈ ಭಾಗದಲ್ಲಿ ಭೂಕುಸಿತ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚು. ಅಲ್ಲದೇ ಈ ಪ್ರದೇಶದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಣ್ಣು ಸಡಿಲಗೊಂಡು ಭೂಕುಸಿತ ಉಂಟಾಗುವ ಸಾಧ್ಯತೆ ಇದೆʼ ಎಂದರು.

ಹವಾಮಾನ ವೈಪರೀತ್ಯದಿಂದ ಇತ್ತೀಚಿನ ವರ್ಷಗಳಲ್ಲಿ ಮಳೆಗಾಲದಲ್ಲಿ ಸಾಕಷ್ಟು ವ್ಯತ್ಯಾಸವಾಗಿದೆ. ಒಂದು ವಾರದ ಅವಧಿಯಲ್ಲಿ ಸುರಿಯಬೇಕಾದ ಮಳೆ ಒಂದೇ ದಿನದಲ್ಲಿ, ಒಂದು ತಿಂಗಳ ಅವಧಿಯಲ್ಲಿ ಸುರಿಯಬೇಕಾದ ಮಳೆ ಒಂದೇ ವಾರದಲ್ಲಿ ಸುರಿಯುತ್ತಿದೆ. ಮಳೆಯಾದಾಗ ವಿವಿಧ ಮಾದರಿಯಲ್ಲಿ ಭೂಕುಸಿತ ಉಂಟಾಗುತ್ತದೆ. ಭಾರೀ ಮಳೆಯಾದಾಗ ಮಲೆನಾಡಿನ ರಸ್ತೆಯ ತಿರುವುಗಳಲ್ಲಿ ಭೂಕುಸಿತ ಉಂಟಾಗುತ್ತದೆ ಎಂದರು.

ಶೇ 50ರಷ್ಟು ಅಪಾಯದ ಮುನ್ಸೂಚನೆ ಇದ್ದರೂ, ಎಚ್ಚರಿಕೆ ಕೊಡಲಿ

ಭೂಕುಸಿತದ ಪರಿಸ್ಥಿತಿ ಇದ್ದರೆ, ಯಾವ ಭಾಗದಲ್ಲಿ ಭೂಕುಸಿತ ಉಂಟಾಗಲಿದೆ ಎಂದು ಮೊದಲೇ ಗುರುತಿಸಿ, ಆಯಾ ನಿರ್ದಿಷ್ಟ ಪ್ರದೇಶದಲ್ಲಿ ಮೊದಲೇ ಮುಂಜಾಗ್ರತಾ ಕ್ರಮ ವಹಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಎದುರಾಗುವ ಅಪಾಯವನ್ನು ತಪ್ಪಿಸಬಹುದು ಎಂದು ಶ್ರೀನಿವಾಸರೆಡ್ಡಿ ಅಭಿಪ್ರಾಯಪಟ್ಟರು.

ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಇನ್ನು ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

ಆರೆಂಜ್ ಅಲರ್ಟ್: ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್: ಇನ್ನು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಯೆಲ್ಲೋ ಅರ್ಲಟ್ ಘೋಷಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ರೆಡ್ ಅಲರ್ಟ್ ಘೋಷಣೆ: ರಾಜ್ಯದ 10 ಜಿಲ್ಲೆಗಳಲ್ಲಿ ಶನಿವಾರದಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಭಾಗದಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.

ಯಾವ ಸಂದರ್ಭದಲ್ಲಿ ಅಲರ್ಟ್‌ ನೀಡಲಾಗುತ್ತದೆ

ಮಳೆ ಪ್ರಮಾಣದ ಆಧಾರದ ಮೇಲೆ ಅಲರ್ಟ್ ಘೋಷಿಸಲಾಗುತ್ತದೆ. 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದರೆ, ಯೆಲ್ಲೋ ಅಲರ್ಟ್ ಘೋಷಿಸಲಾಗುತ್ತದೆ. 115.6 ಮಿ.ಮೀನಿಂದ 204.4 ಮಿ.ಮೀ ನವರೆಗೆ ಮಳೆಯಾಗುವ ಸಾಧ್ಯತೆ ಇದ್ದರೆ, ಆರೆಂಜ್ ಅಲರ್ಟ್ ಘೋಷಿಸಲಾಗುತ್ತದೆ. ಇನ್ನು 204.5 ಮಿ.ಮೀ ವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದ್ದರೆ, ರೆಡ್ ಅಲರ್ಟ್ ಘೋಷಿಸಲಾಗುತ್ತದೆ.

ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆ

ಜೂನ್ 22: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ( 30ರಿಂದ 40 ಕಿ.ಮೀ ವೇಗದಲ್ಲಿ) ಮಳೆಯಾಗಲಿದೆ.

ಜೂನ್ 23: ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗ ಸಹಿತ ಗಾಳಿಯೊಂದಿಗೆ ( 30ರಿಂದ 40 ಕಿ.ಮೀ) ಮಳೆಯಾಗಲಿದೆ.

ಜೂನ್ 24: ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ ವೇಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 25: ರಾಜ್ಯದಾದ್ಯಂತ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಅಥವಾ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ಇದೆ ಪರಿಸ್ಥಿತಿ ಇರಲಿದ್ದು, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಸುಳಿಗಾಳಿಯು ಪ್ರಬಲವಾಗಿ ಬೀಸಲಿದೆ. ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More
Next Story