
ರಾಜ್ಯದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಜುಲೈ 8ರವರೆಗೆ ಭಾರಿ ಮಳೆ, ಒಂಬತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಜುಲೈ 8ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.
ಬೆಂಗಳೂರು ಹಾಗೂ ಒಳನಾಡಿನ ವಾತಾವರಣ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ಉತ್ತರ ಒಳನಾಡಿನ ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಜಲಾಶಯಗಳಿಗೆ ಹೆಚ್ಚಿದ ಒಳಹರಿವು
ಇತ್ತೀಚೆಗೆ ಕೊಂಚ ಬಿಡುವು ನೀಡಿದ್ದ ಮಳೆ ಜುಲೈ 3ರಿಂದ ಮತ್ತೆ ಚುರುಕುಗೊಂಡಿದೆ. ಮಲೆನಾಡು ಹಾಗೂ ಕೊಡಗಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆಯಿಂದಾಗಿ ಜಲಾಶಯಗಳಿಗೆ ಉತ್ತಮ ಒಳಹರಿವು ದಾಖಲಾಗಿದೆ. ವಿಶೇಷವೆಂದರೆ, ಕಳೆದ 85 ವರ್ಷಗಳಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದರು.
ಹಾಸನ ಸುತ್ತಮುತ್ತ ಉತ್ತಮ ಮಳೆಯಾದ ಪರಿಣಾಮ, ಗೋರೂರು ಬಳಿಯ ಹೇಮಾವತಿ ಜಲಾಶಯಕ್ಕೆ ಒಳಹರಿವು 17,123 ಕ್ಯುಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ 2917.32 ಅಡಿಗೆ ತಲುಪಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತಿದ್ದು, ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನದಿ ಪಾತ್ರದ ಗ್ರಾಮಗಳ ಜನರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.