
ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್
ಗದ್ದುಗೆ ಗುದ್ದಾಟ| ಸಿಎಂ-ಡಿಸಿಎಂ ಜೊತೆ ಶನಿವಾರ ಹೈಕಮಾಂಡ್ ಸಭೆ, ರಾಹುಲ್ ತೀರ್ಮಾನದತ್ತ ಎಲ್ಲರ ಚಿತ್ತ
ಸಿಎಂ ಸಿದ್ದರಾಮಯ್ಯನವರ ಜೊತೆ ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ಎಚ್.ಕೆ. ಪಾಟೀಲ್ ಸೇರಿದಂತೆ ಇತರೆ ಸಚಿವರೂ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಗೊಂದಲ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮುಜುಗರ ತಪ್ಪಿಸಲು ಕಾಂಗ್ರೆಸ್ ಹೈಕಮಾಂಡ್ ಶನಿವಾರ (ನ.29) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕರೆಸಿ ಸಮಾಲೋಚನೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲೇ ನಾಯಕರ ಸಮ್ಮುಖದಲ್ಲೇ ಸಮಸ್ಯೆ ಬಗೆಹರಿಸೋಣ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಂದೇಶ ರವಾನಿಸಿದ್ದು, ಶುಕ್ರವಾರ ರಾತ್ರಿ(ನ.28) ಅಥವಾ ಶನಿವಾರ(ನ.29) ಸಿಎಂ ಹಾಗೂ ಡಿಸಿಎಂ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.
ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ನ.29 ಅಥಾವ ನ.30 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಒಳಗೊಂಡ ಸಭೆ ನಡೆಸಿ, ನಾಯಕತ್ವದ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭಾಗವಹಿಸಲಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ, ನಿಮ್ಮ ಜೊತೆ ನಾಲ್ಕೈದು ಹಿರಿಯ ಸಚಿವರನ್ನು ಕರೆದುಕೊಂಡು ಬನ್ನಿ ಎಂಬ ಸಂದೇಶ ನೀಡದ್ದು, ಅದರಂತೆ ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ಎಚ್.ಕೆ. ಪಾಟೀಲ್ ಸೇರಿದಂತೆ ಇತರೆ ಸಚಿವರೂ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸ್ಥಾನ ಬದಲಾದರೆ ದಲಿತ ಸಿಎಂ ದಾಳ
ದೆಹಲಿಯಲ್ಲಿ ನಡೆಯುವ ಹೈಕಮಾಂಡ್ ನಾಯಕರ ಸಭೆಯಲ್ಲಿ ನಾಯಕತ್ವದ ಗೊಂದಲದ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸಿದರೆ ದಲಿತರಿಗೆ ಸಿಎಂ ಸ್ಥಾನದಡಿ ನನ್ನನ್ನು ಪರಿಗಣಿಸಬೇಕು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೈಕಮಾಂಡ್ ನಾಯಕರಿಗೆ ಮನವಿ ಮಾಡಲಿದ್ದಾರೆ.
ರಾಹುಲ್ ನಿರ್ಧಾರದತ್ತ ಎಲ್ಲರ ಚಿತ್ತ
ರಾಜ್ಯ ರಾಜಕಾರಣದಲ್ಲಿನ ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ ತೆಗೆದುಕೊಳ್ಳು ನಿರ್ಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಗಳು ನಿರ್ಧಾರವಾಗಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ರಾಹುಲ್ ಗಾಂಧಿ ಸಿದ್ದರಾಮಯ್ಯ ಪರವಾಗಿದ್ದಾರೆ ಎಂಬ ಮಾತು ಸಿಎಂ ಪಾಳಯದಲ್ಲಿ ಕೇಳಿ ಬರುತ್ತಿದ್ದು, ರಾಹುಲ್ ಗಾಂಧಿ ಯಾವ ನಿಲುವು ತೆಗೆದುಕೊಳ್ಳಲಿದ್ದಾರೆ ಎನ್ನುವುದು ಸದ್ಯದ ಕುತೂಹಲವಾಗಿದೆ.

