
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ಸರ್ಕಾರ, ಗೃಹ ಇಲಾಖೆಗೆ ಹೈಕೋರ್ಟ್ ನೋಟಿಸ್
ಲಾಠಿಚಾರ್ಜ್ ನಡೆಸಿದ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಲಾಠಿ ಚಾರ್ಜ್ ಕುರಿತಂತೆ ಸ್ಪಷ್ಟನೆ ನೀಡಲು ಸೂಚಿಸಿದೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನಾನಿರತ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠವು ರಾಜ್ಯ ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಲಾಠಿಚಾರ್ಜ್ ನಡೆಸಿದ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಲಾಠಿ ಚಾರ್ಜ್ ಕುರಿತಂತೆ ಸ್ಪಷ್ಟನೆ ನೀಡಲು ಸೂಚಿಸಿದೆ.
ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಲಾಠಿಚಾರ್ಜ್ ನಂತರವೂ ೧೨ ಮಂದಿ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ರದ್ದು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಲಾಠಿಚಾರ್ಜ್ ಸಂಬಂಧ ಸಿಎಂ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದೆವು. ಆದರೆ ಯಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿಲ್ಲ. ಹೀಗಾಗಿ ಕೋರ್ಟ್ ಮೊರೆ ಹೋಗಿದ್ದೇವೆ. ಡಿ.23ರಂದು ಹಲ್ಲೆಗೊಳಗಾದವರ ಮನೆಗಳಿಗೆ ಭೇಟಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಪಂಚಮಸಾಲಿ ಹೋರಾಟಗಾರರ ಪರವಾಗಿ ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ, ಪೂಜಾ ಸವದತ್ತಿ ಅವರು ವಾದ ಮಂಡಿಸಿದರು.
ನ್ಯಾಯಾಂಗ ತನಿಖೆಗೆ ಒತ್ತಾಯ
ಪಂಚಮಸಾಲಿ ಹೋರಾಟದ ವೇಳೆ ಜಿಲ್ಲಾಡಳಿತ 144 ಸೆಕ್ಷನ್ ಅನ್ವಯ ನಿಷೇದಾಜ್ಞೆ ಜಾರಿ ಮಾಡಿರಲಿಲ್ಲ. ಪ್ರತಿಭಟನೆ ಹತ್ತಿಕ್ಕಲು ನೇರವಾಗಿ ಲಾಠಿಚಾರ್ಜ್ ಮಾಡಲಾಗಿದೆ. ಲಾಠಿಚಾರ್ಜ್ ಬಳಿಕವೂ ಹೋರಾಟಗಾರರು ಸತ್ಯಾಗ್ರಹ ನಡೆಸಿದ್ದರು. ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಡಿ.19ರವರೆಗೆ ಹೋರಾಟದಲ್ಲಿ ಭಾಗವಹಿಸಿದ್ದರು. ಆದರೂ ಸರ್ಕಾರ ಹೋರಾಟಗಾರರ ಮನವಿಗೆ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ಪ್ರಕರಣ ಕುರಿತಂತೆ ನ್ಯಾಯಾಂಗ ತನಿಖೆ ಆಗಬೇಕು. ಲಾಠಿಚಾರ್ಜ್ ಮಾಡಲು ಆದೇಶ ಕೊಟ್ಟವರ ವಿರುದ್ಧ ಕ್ರಮ ಜರುಗಿಸಬೇಕು. ಸರ್ಕಾರದ ಹತ್ತು ಇಲಾಖೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಎಲ್ಲರಿಗೂ ನ್ಯಾಯಾಲಯ ನೋಟಿಸ್ ನೀಡಿದೆ ಎಂದು ವಿವರಿಸಿದ್ದಾರೆ.