5, 8, 9 ಮತ್ತು 11ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದು: ಹೈಕೋರ್ಟ್ ಮಹತ್ವದ ಆದೇಶ
x

5, 8, 9 ಮತ್ತು 11ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದು: ಹೈಕೋರ್ಟ್ ಮಹತ್ವದ ಆದೇಶ


ಬೆಂಗಳೂರು: ರಾಜ್ಯ ಪಠ್ಯಕ್ರಮ ಶಾಲೆಗಳ 5, 8, 9 ಮತ್ತು 11ನೇ ತರಗತಿ ಪಬ್ಲಿಕ್‌ ಪರೀಕ್ಷೆ(ಬೋರ್ಡ್‌ ಪರೀಕ್ಷೆ)ಯನ್ನು ರದ್ದುಪಡಿಸಿ ರಾಜ್ಯ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಪಠ್ಯಕ್ರಮ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದೀಗ ಆ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಬೋರ್ಡ್ ಪರೀಕ್ಷೆ ವಿಚಾರವಾಗಿ ಸುತ್ತೋಲೆಯೊಂದನ್ನು ಹೊರಡಿಸಿತ್ತು.

ಆ ಸುತ್ತೋಲೆ ಪ್ರಕಾರ 5,8,9 ಹಾಗೂ 11ನೇ ತರಗತಿ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ ನಡೆಸಬೇಕು ಎಂದು ಹೇಳಲಾಗಿತ್ತು. ಇದಕ್ಕೆ ಪೋಷಕರು ಹಾಗೂ ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದರು.

ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ತೀರ್ಪು ಪ್ರಕಟಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಇದು ಆರ್‌ಟಿಇ ಕಾಯಿದೆಯ ಉಲ್ಲಂಘನೆಯಾಗುತ್ತದೆ ಎನ್ನುವ ಉದ್ದೇಶದಿಂದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಆದೇಶದಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ತಕ್ಷಣಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಪರೀಕ್ಷೆ ನಡೆಸುವ ಸಾಧ್ಯತೆ ಕಡಿಮೆ ಇದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.

ಈ ವೇಳೆ ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಕೆಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು. ಆದರೆ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

Read More
Next Story