
ಹೈಕೋರ್ಟ್ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ದಸರಾ ಉದ್ಘಾಟನೆ ವಿವಾದ: ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ ಅರ್ಜಿ ತುರ್ತು ವಿಚಾರಣೆಗೆ ಹೈಕೋರ್ಟ್ ನಕಾರ
ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಬಾನು ಅವರು ಉದ್ಘಾಟಿಸುವುದನ್ನು ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದು, ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ, ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ತುರ್ತಾಗಿ ವಿಚಾರಣೆಗೆ ಪರಿಗಣಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
"ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕಾದ ಯಾವುದೇ ಅಗತ್ಯವಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿಯಾಗಲಿದೆ" ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠವು ಅರ್ಜಿದಾರರಿಗೆ ಸ್ಪಷ್ಟಪಡಿಸಿದೆ.
ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಬಾನು ಅವರು ಉದ್ಘಾಟಿಸುವುದನ್ನು ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದು, ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದರು.
ದಸರಾ ಹಬ್ಬವು ಹಿಂದೂ ಧರ್ಮದ ಪ್ರಮುಖ ಆಚರಣೆಯಾಗಿದ್ದು, ಇದು ಚಾಮುಂಡೇಶ್ವರಿ ದೇವಿಯು ಮಹಿಷಾಸುರನನ್ನು ಸಂಹರಿಸಿದ ವಿಜಯದ ಸಂಕೇತವಾಗಿದೆ. ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲದ ಮತ್ತು ಈ ಹಿಂದೆ ಹಿಂದೂ ಹಾಗೂ ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸುವುದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಸರ್ಕಾರದ ಈ ಕ್ರಮವು ಸಂವಿಧಾನದ 25 ಮತ್ತು 26ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾಗಿರುವ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಪ್ರತಾಪ್ ಸಿಂಹ ಪ್ರತಿಪಾದಿಸಿದ್ದಾರೆ. ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಪ್ರಮೋದಾ ದೇವಿ ಒಡೆಯರ್ ಅವರು ಕೂಡ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.