
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ: ಸರ್ಕಾರಕ್ಕೆ ನೋಟಿಸ್ ಜಾರಿ
ವಿಚಾರಣೆಯ ವೇಳೆ ತಿಮರೋಡಿ ಪರ ವಕೀಲರು, "ಗಡಿಪಾರು ಆದೇಶವು ಕಾನೂನುಬಾಹಿರ ಮತ್ತು ಏಕಪಕ್ಷೀಯವಾಗಿದೆ. ಅರ್ಜಿದಾರರ ಅಹವಾಲನ್ನು ಆಲಿಸದೆಯೇ ಏಕಾಏಕಿ ಈ ಆದೇಶವನ್ನು ಹೊರಡಿಸಲಾಗಿದೆ.
ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ತಿಮರೋಡಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ತಮ್ಮನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠವು, ಗಡಿಪಾರು ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.
ವಿಚಾರಣೆಯ ವೇಳೆ ತಿಮರೋಡಿ ಪರ ವಕೀಲರು, "ಗಡಿಪಾರು ಆದೇಶವು ಕಾನೂನುಬಾಹಿರ ಮತ್ತು ಏಕಪಕ್ಷೀಯವಾಗಿದೆ. ಅರ್ಜಿದಾರರ ಅಹವಾಲನ್ನು ಆಲಿಸದೆಯೇ ಏಕಾಏಕಿ ಈ ಆದೇಶವನ್ನು ಹೊರಡಿಸಲಾಗಿದೆ. ಹಾಗಾಗಿ, ಈ ಆದೇಶವನ್ನು ರದ್ದುಪಡಿಸಬೇಕು" ಎಂದು ವಾದಿಸಿದರು. ಅರ್ಜಿ ಇತ್ಯರ್ಥಗೊಳ್ಳುವವರೆಗೆ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಅವರು ಮಧ್ಯಂತರ ಮನವಿ ಮಾಡಿದ್ದರು.
ವಾದವನ್ನು ಆಲಿಸಿದ ನ್ಯಾಯಪೀಠವು, ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಡಿವೈಎಸ್‌ಪಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.