Mysore MUDA Scam| ಹೈಕೋರ್ಟ್‌ ನಿರ್ಧಾರಕ್ಕೆ ಬಿಜೆಪಿ ಸ್ವಾಗತ; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ
x

Mysore MUDA Scam| ಹೈಕೋರ್ಟ್‌ ನಿರ್ಧಾರಕ್ಕೆ ಬಿಜೆಪಿ ಸ್ವಾಗತ; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ಹೇಳಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ಪ್ರತಿಪಾದಿಸಿದೆ


ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ಹೇಳಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ಪ್ರತಿಪಾದಿಸಿದೆ.

ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ನಿಂದಿಸುವುದು ಬಿಟ್ಟು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

"ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ," ಎಂದು ಬಿಜೆಪಿ ತನ್ನ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾಗೋಷ್ಠಿ ನಡೆಸಿ, ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ಅವರು ಹೇಳಿದ್ದಾರೆ.

"ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದ್ದಾರೆ.

ಪಾದಯಾತ್ರೆಗೆ ಜಯ

"ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿವರಿಸಿದರು.

ರಾಜ್ಯಪಾಲರಿಗೆ ಅನೇಕ ಆರ್‌ಟಿಐ ಕಾರ್ಯಕರ್ತರು ಖಾಸಗಿ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು ಎಂದ ಅವರು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ; ಅವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾಗುತ್ತದೆ ಎಂದರು.

ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು. ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದೂ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷದ ಮುಂದಿನ ನಡೆಯ ಕುರಿತು ಪ್ರಮುಖರು, ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಅಶೋಕ್‌ ಆಗ್ರಹ

ಹೈಕೋರ್ಟ್‌ ನಿರ್ಧಾರದ ಬಳಿಕ ಪ್ರತಿಕ್ರಿಯೆ ನೀಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನು, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಹೈಕೋರ್ಟ್ ನ ತೀರ್ಪು ಇಡೀ ಕರ್ನಾಟಕ ಕಾಂಗ್ರೆಸ್‌ಗೆ ಛಡಿ ಏಟು ಕೊಟ್ಟಿದೆ ಎಂದು ಛೇಡಿಸಿದ್ದಾರೆ.

Read More
Next Story