
ಸಾಂದರ್ಭಿಕ ಚಿತ್ರ
ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಹಿಟ್ ಅಂಡ್ ರನ್: ಬೈಕ್ ಸವಾರ ಸ್ಥಳದಲ್ಲೇ ಸಾವು
ಘಟನಾ ಸ್ಥಳದಲ್ಲಿ ಬೈಕ್ ಮತ್ತು ಸವಾರನ ಮೃತದೇಹ ಮಾತ್ರ ಪತ್ತೆಯಾಗಿದ್ದು, ಡಿಕ್ಕಿ ಹೊಡೆದ ವಾಹನದ ಯಾವುದೇ ಕುರುಹು ಲಭ್ಯವಾಗಿಲ್ಲ.
ನಗರದ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಇಂದು (ಭಾನುವಾರ) ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ ಸುಮಾರು 6:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಬೈಕ್ ಮತ್ತು ಸವಾರನ ಮೃತದೇಹ ಮಾತ್ರ ಪತ್ತೆಯಾಗಿದ್ದು, ಡಿಕ್ಕಿ ಹೊಡೆದ ವಾಹನದ ಯಾವುದೇ ಕುರುಹು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ಇದೊಂದು ಹಿಟ್ ಅಂಡ್ ರನ್ ಪ್ರಕರಣವೆಂದು ಶಂಕಿಸಲಾಗಿದೆ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೀಣ್ಯ ಸಂಚಾರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 106ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪಘಾತವೆಸಗಿದ ವಾಹನವನ್ನು ಪತ್ತೆಹಚ್ಚಲು ಸಮೀಪದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.