
ಒಳ ಮೀಸಲಾತಿ ಜಾರಿ | ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಸಿದ್ದರಾಮಯ್ಯ
ʻʻಒಳಮೀಸಲಾತಿ ಜಾರಿ ವಿಚಾರದಲ್ಲಿ ನಾನು ಬದ್ಧನಾಗಿದ್ದೇನೆ. ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿ, ನಂತರ ಸಂಪುಟ ಸಭೆಯಲ್ಲಿ ಚರ್ಚಿಸುವ ಮೂಲಕ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ ಜಾರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದ್ದು, ಕಾಂಗ್ರೆಸ್ ನಾಯಕರು ಕೂಡ ಸಿಎಂ ಸಿದ್ದರಾಮಯ್ಯ ಅವರಿಗೆ ಒಳಮೀಸಲಾತಿ ಜಾರಿ ಮಾಡಲು ಪಟ್ಟುಹಿಡಿದಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಒಳಮೀಸಲಾತಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉಪಸ್ಥಿತಿಯಲ್ಲಿ ಮಾದಿಗ ಸಮುದಾಯದ ಮಾಜಿ ಸಚಿವರು, ಶಾಸಕರು ಸಭೆಯಲ್ಲಿ ಭಾಗವಹಿಸಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕರಾದ ಎನ್. ಶ್ರೀನಿವಾಸ, ಬಸವಂತಪ್ಪ, ಡಾ. ತಿಮ್ಮಯ್ಯ ಶಿವಣ್ಣ ಹಾಗೂ ಸಮುದಾಯದ ಇತರ ಮುಖಂಡರು ಉಪಸ್ಥಿತರಿದ್ದರು.