ಗಾಂಧಿ ಭಾರತ | ಜ.21ಕ್ಕೆ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಸಮಾವೇಶದ ಕಾರ್ಯಕ್ರಮ ಮುಂದೂಡಲಾಗಿತ್ತು ಇದೀಗ ಜನವರಿ 21 ನಡೆಸಲಾಗುವುದು ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶತಮಾನೋತ್ಸವದ ಸ್ಮರಣಾರ್ಥ `ಗಾಂಧಿ ಭಾರತ' ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಗಾವಿಯಲ್ಲಿ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಡಿಸೆಂಬರ್ 27 ರಂದು ʼಗಾಂಧಿ ಭಾರತʼ ಸಮಾವೇಶ ನಡೆಸಲು ದಿನಾಂಕ ನಿಗದಿಯಾಗಿತ್ತು. ಡಿಸೆಂಬರ್ 26 ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದಾಗಿ ಈ ಸಭೆಯನ್ನು ಮುಂದೂಡಲಾಗಿತ್ತು.
ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸಂಜೆ ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದೆ. ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸೆಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು. ಇದೀಗ ಕಾರ್ಯಕ್ರಮವನ್ನು ಜನವರಿ 21 ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಜನವರಿ 21 ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಅನಾವರಣಗೊಳಿಸುವ ಸರ್ಕಾರಿ ಕಾರ್ಯಕ್ರಮವು ಮೊದಲು ನಡೆಯಲಿದ್ದು, ಎಲ್ಲಾ ಪಕ್ಷಗಳ ಶಾಸಕರನ್ನು ಆಹ್ವಾನಿಸಲಾಗುತ್ತದೆ. ಬಳಿಕ ಎಐಸಿಸಿ ಆಯೋಜಿಸಿರುವ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಕಾರ್ಯಕ್ರಮ ನಡೆಯಲಿದೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು. ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಕನಿಷ್ಠ 100 ನಾಯಕರು ಮತ್ತು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಜನವರಿ 13 ರಂದು ಕೆಪಿಸಿಸಿ ಸಾಮಾನ್ಯ ಸಭೆ ನಡೆಯಲಿದೆ. ಬಳಿಕ ಕೆಪಿಸಿಸಿ ಪದಾಧಿಕಾರಿಗಳ ಕಾರ್ಯಕ್ರಮ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.