ಸಿದ್ದರಾಮಯ್ಯ - ಡಿಕೆಶಿ ಶೀತಲ ಸಮರ: ʼಒಬ್ಬ ವ್ಯಕ್ತಿ-ಒಂದೇ ಹುದ್ದೆʼಗೆ ಅತೃಪ್ತರ ಪಟ್ಟು
ಕೆಪಿಸಿಸಿ ಅಧ್ಯಕ್ಷ ಗಾದಿಯಲ್ಲಿ ಹಾಗೂ ಉಪಮುಖ್ಯಮಂತ್ರಿಯಾಗಿ ಎರಡೂ ಅಧಿಕಾರದಲ್ಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಒಂದು ಅಧಿಕಾರ ತ್ಯಜಿಸುವಂತೆ ಅನಧಿಕೃತ ಸವಾಲನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎಸೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ʼಸಿಎಂ ಹುದ್ದೆʼ ಶೀತಲ ಸಮರ ಇನ್ನೊಂದು ಆಯಾಮಕ್ಕೆ ತಿರುಗಿದೆ. ಸಿದ್ದರಾಮಯ್ಯ ಆಪ್ತ ಸತೀಶ್ ಜಾರಕಿಹೊಳಿ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಲು ಅಣಿಯಾಗಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಹುದ್ದೆ ತಮಗೆ ಲಭಿಸಬೇಕೆಂಬ ತೆರೆಮರೆಯ ಯತ್ನವನ್ನು ಡಿ.ಕೆ. ಶಿವಕುಮಾರ್ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅದೇ ಕಾರಣಕ್ಕೆ ಇತ್ತೀಚೆಗೆ ಅವರ ಆಪ್ತರಿಂದಲೂ ಸಿಎಂ ಹುದ್ದೆ ಡಿ.ಕೆ.ಶಿ. ಅವರಿಗೆ ಲಭಿಸಬೇಕೆಂಬ ಒತ್ತಾಸೆ ಕೇಳಿಬಂದಿದೆ. ಜತೆಗೆ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಟ್ಟದಲ್ಲೂ ಅಧಿಕಾರ ಪ್ರಾಪ್ತಿಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಆಪ್ತರ ಬಣದ ಸತೀಶ್ ಜಾರಕಿಹೊಳಿ ದಾಳ ಉರುಳಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಗಾದಿಯಲ್ಲಿ ಹಾಗೂ ಉಪಮುಖ್ಯಮಂತ್ರಿಯಾಗಿ ಎರಡೂ ಅಧಿಕಾರದಲ್ಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಒಂದು ಅಧಿಕಾರ ತ್ಯಜಿಸುವಂತೆ ಅನಧಿಕೃತ ಸವಾಲನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎಸೆದಿದ್ದಾರೆ. ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಶಮನ ಹಾಗೂ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಸತೀಶ್ ಜಾರಕಿಹೊಳಿ ಅವರು ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಹಕ್ಕೊತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಜತೆಗೆ, ಕೆಪಿಸಿಸಿ ಅಧ್ಯಕ್ಷರಾದರೆ ತಾವು ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿಯೂ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇನ್ನೊಂದು ಡಿಸಿಎಂ ಹುದ್ದೆ ಸೃಷ್ಟಿ?
ಈ ನಡುವೆ, ಇನ್ನೊಂದು ಮೂಲದ ಪ್ರಕಾರ, ಅಸಮಾಧಾನಿತ ಸಚಿವರನ್ನು ತಹಬದಿಗೆ ತರಲು ಇನ್ನೊಂದು ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸುರ್ಜೇವಾಲ ಜತೆ ನಡೆದ ಮಾತುಕತೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಾವು ಸಚಿವ ಸಂಪುಟದ ಮುಖ್ಯಸ್ಥನಾಗಿದ್ದು, ಡಿಸಿಎಂ ಹುದ್ದೆ ಸೃಷ್ಟಿಸುವ ಅಧಿಕಾರವಿದೆ. ಲಿಂಗಾಯತ ಅಥವಾ ದಲಿತ ಸಮೂದಾಯದ ಒಬ್ಬರನ್ನು ಡಿಸಿಎಂ (ಎಂ.ಬಿ. ಪಾಟೀಲ್ ಅಥವಾ ಡಾ. ಜಿ. ಪರಮೇಶ್ವರ) ಮಾಡಲು ತಾವು ಸಿದ್ಧ ಇರುವುದಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆ ಮೂಲಕ ಡಿ.ಕೆ. ಶಿವಕುಮಾರ್ ಅವರನ್ನು ಹಂತಹಂತವಾಗಿ ಮುಖ್ಯಮಂತ್ರಿ ಹುದ್ದೆಯ ಸಮೀಪ ಸುಳಿಯದಂತೆ ಮಾಡುವುದು ಹಾಗೂ ಡಿ.ಕೆ. ಶಿವಕುಮಾರ್ ಅಧಿಕಾರವನ್ನು ಮೊಟಕುಗೊಳಿಸುವುದು ಉದ್ದೇಶವಿದೆ ಎನ್ನಲಾಗಿದೆ. ಆ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಹುದ್ದೆಗಳ ಸಂಬಂಧ ಹಸ್ತಕ್ಷೇಪಗಳು ಆರಂಭವಾಗಿವೆ ಎಂದು ಹೇಳಲಾಗಿದೆ.
ಆ ಮೂಲಕ, ಕಾಂಗ್ರೆಸ್ ಬೆಂಬಲಿಸುತ್ತಿರುವ ಅಹಿಂದ ವರ್ಗಗಳ ನಾಯಕರಿಗೆ ಮಣೆ ಹಾಕುವ ʼತಂತ್ರಗಾರಿಕೆʼಯನ್ನು ಸಿದ್ದರಾಮಯ್ಯ ಹೆಣೆದಿದ್ದಾರೆ ಎನ್ನಲಾಗಿದೆ. ಲಿಂಗಾಯತ ಮುಖಂಡರಾದ ಎಂ.ಬಿ. ಪಾಟೀಲ ಅಥವಾ ಈಶ್ವರ ಖಂಡ್ರೆ, ದಲಿತ ಮುಖಂಡರಾದ ಡಾ. ಜಿ. ಪರಮೇಶ್ವರ್ ಅಥವಾ ಸತೀಶ್ ಜಾರಕಿಹೊಳಿ ಹೆಸರುಗಳು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿ ಚಾಲ್ತಿಗೆ ಬಂದಿವೆ. ಮುಸ್ಲಿಂ ಸಮೂದಾಯದ ಯು.ಟಿ. ಖಾದರ್ ಅವರು ಈಗಾಗಲೇ ವಿಧಾನಸಭೆಯ ಸ್ಫೀಕರ್ ಅಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಕ್ಕಲಿಗ ಮುಖಂಡ ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಆಗಿ ಅಥವಾ ಕೆಪಿಸಿಸಿ ಅಧ್ಯಕ್ಷರಾಗಿ ʼಒಬ್ಬ ವ್ಯಕ್ತಿ- ಒಂದು ಹುದ್ದೆʼ ನಿಲುವಿಗೆ ಬದ್ಧರಾಗಿರಲಿ ಎಂಬ ಒತ್ತಡ ನಿಧಾನವಾಗಿ ಆರಂಭವಾಗಿದೆ.
ಅಧ್ಯಕ್ಷರಾಗಿ ನಾಲ್ಕು ವರ್ಷ
2020 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದ ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧಿಕಾರಾವಧಿ ಕಳೆದ ನವೆಂಬರ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಅದಾದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ಜೋರಾಗಿತ್ತು. ಸಚಿವರಾದ ಡಾ. ಜಿ.ಪರಮೇಶ್ವರ್, ಕೆ. ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಹಾಗೂ ಈಶ್ವರ್ ಖಂಡ್ರೆ ಹೆಸರು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿತ್ತು.
ಜಾರಕಿಹೊಳಿ ಪ್ರಯತ್ನ
ಸೋಮವಾರ ತಡರಾತ್ರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸುರ್ಜೇವಾಲಾ ಅವರನ್ನು ಭೇಟಿಯಾಗಿ, ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ತಮಗೆ ನೀಡಬೇಕು. ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ 50 ಕ್ಕೂ ಹೆಚ್ಚು ಶಾಸಕರು ಬೆಂಬಲಿಸಿದ್ದಾರೆ.ರಾಜ್ಯದಲ್ಲಿ ಹೆಚ್ಚು ವಾಲ್ಮೀಕಿ ಸಮುದಾಯದ ಶಾಸಕರನ್ನು ಗೆಲ್ಲಿಸಿಕೊಂಡು ಬರುವಲ್ಲಿ ತಮ್ಮ ಪಾತ್ರವಿದೆ ಎಂಬುದನ್ನು ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ, ಸಚಿವರು ಹಾಗೂ ಶಾಸಕರಿಗೆ ಔತಣಕೂಟ ಏರ್ಪಡಿಸಲಾಗಿತ್ತು. ಅಂದಿನ ಡಿನ್ನರ್ ಸಭೆಯಲ್ಲಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚಿಸಲಾಗಿತ್ತು ಎನ್ನಲಾಗಿದೆ.
ನನಗೇ ಕೊಡಿ ಎಂದು ಕೇಳಿಲ್ಲ ಎಂದ ಜಾರಕಿಹೊಳಿ
ಈ ನಡುವೆ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ʼನನಗೇ ಕೊಡಿʼ ಎಂಬ ಬೇಡಿಕೆ ಇಟ್ಟಿಲ್ಲ. ಆದರೆ, ಯಾರಿಗಾದರೂ ಪೂರ್ಣಾವಧಿ ಅಧ್ಯಕ್ಷ ಸ್ಥಾನ ನೀಡಿ ಎಂದು ಮನವಿ ಮಾಡಿರುವುದಾಗಿ ಹೇಳಿರುವುದಾಗಿ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. "ಅಧ್ಯಕ್ಷ ಹುದ್ದೆಗೆ ಸಂಬಂಧಿಸಿ ನನ್ನ ವೈಯಕ್ತಿಕ ಅಭಿಪ್ರಾಯವನ್ನೂ ಸುರ್ಜೇವಾಲ ಅವರಿಗೆ ಹೇಳಿದ್ದೇನೆ," ಎಂದೂ ಅವರು ಮಾಧ್ಯಮದ ಜತೆ ಮಾತನಾಡಿ ಸ್ಪಷ್ಟಪಡಿಸಿದ್ದಾರೆ.
"ಪೂರ್ಣಾವಧಿ ಅಧ್ಯಕ್ಷ ಸ್ಥಾನ" ಹೇಳಿಕೆಗೆ ಜಾರಕಿಹೊಳಿ ಬದ್ಧರಾಗಿದ್ದಾರೆ. "ಡಿ.ಕೆ. ಶಿವಕುಮಾರ್ ಅವರನ್ನೇ ಅಧ್ಯಕ್ಷರಾಗಿ ಮುಂದುವರಿಸುವುದಾದರೆ ಅದನ್ನಾದರೂ ಸ್ಪಷ್ಟಪಡಿಸಲು ಮನವಿ ಮಾಡಿದ್ದೇನೆ," ಎಂದವರು ಹೇಳಿದ್ದಾರೆ.
ಆ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಎರಡೂ ಅಧಿಕಾರ ಅನುಭವಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದ ʼಒಬ್ಬ ವ್ಯಕ್ತಿ - ಒಂದು ಹುದ್ದೆʼ ನಿಲುವಿಗೆ ಬದ್ಧರಾಗಬೇಕು ಎಂಬ ಪರೋಕ್ಷ ಸಂದೇಶವನ್ನು ರವಾನೆ ಮಾಡಿದ್ದಾರೆ.
ಸಿದ್ದರಾಮಯ್ಯ ಸ್ಪಷ್ಟನೆ
ಈ ಸಂಬಂಧ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದರು.
ಡಿಕೆಶಿ ʼಹಸ್ತಕ್ಷೇಪʼಕ್ಕೆ ತಿರುಗೇಟು
ಈ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಛಾಯೆ ಪರೋಕ್ಷವಾಗಿ ಕಾಣುತ್ತಿದ್ದರೂ, ತಮ್ಮ ತವರು ಜಿಲ್ಲೆ ಬೆಳಗಾವಿ ರಾಜಕಾರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪದೇ ಪದೇ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ʼಬಿಸಿ ಮುಟ್ಟಿಸಲುʼ ಕೂಡಾ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರ ನಡೆದ ಶಾಸಕಾಂಗ ಸಭೆಯಲ್ಲೂ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಬೆಳಗಾವಿ ಡಿಸಿಸಿ ಬ್ಯಾಂಕ್ ವಿಚಾರವಾಗಿ ವಾಗ್ವಾದ ನಡೆದಿತ್ತು. ಸುರ್ಜೇವಾಲಾ ಅವರು ಮಧ್ಯೆ ಪ್ರವೇಶಿಸಿ ಉಭಯರನ್ನು ಸಮಾಧಾನಪಡಿಸಿದ್ದರು. ಇದಾದ ಬೆನ್ನಲ್ಲೇ ತಡರಾತ್ರಿ ಸುರ್ಜೇವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚೆ ನಡೆಸಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಹಕ್ಕೋತ್ತಾಯ ಮಾಡಿರುವುದು ಕುತೂಹಲ ಮೂಡಿಸಿದೆ.
ದೆಹಲಿ ಚುನಾವಣೆ ಮುಗಿದ ಬಳಿಕ ಬದಲಾವಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತಂತೆ ರಾಜ್ಯ ಬಜೆಟ್ ಹಾಗೂ ದೆಹಲಿ ಚುನಾವಣೆ ನಡೆದ ಬಳಿಕ ನಿರ್ಧರಿಸಲಾಗುವುದು ಎಂದು ವರಿಷ್ಠರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸತೀಶ್ ಜಾರಕಿಹೊಳಿ ಅವರಿಗೆ ತಿಳಿಸಿದ್ದಾಗಿ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆಗೆ ಹೈಕಮಾಂಡ್ ಮುಂದಾಗುವ ಸಂದರ್ಭದಲ್ಲಿ ತಮ್ಮನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಕು. ಪಕ್ಷ ಸಂಘಟನೆಗೆ ತಮ್ಮ ಕೊಡುಗೆ, ತಮಗಿರುವ ಶಾಸಕರ ಬೆಂಬಲವನ್ನು ಪ್ರಧಾನವಾಗಿ ಪರಿಗಣಿಸಿ ನೇಮಕ ಮಾಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರು ಹೆಸರು ಅಂತಿಮ?
ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಈ ಬಾರಿ ಲಿಂಗಾಯತ ಸಮುದಾಯಕ್ಕೆ ನೀಡಲು ಹೈಕಮಾಂಡ್ ಚಿಂತನೆ ನಡೆಸಿತ್ತು. ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಈಗ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿ ಅವರು ನೇರವಾಗಿಯೇ ವರಿಷ್ಠರ ಎದುರು ಹುದ್ದೆಗೆ ಬೇಡಿಕೆ ಇಟ್ಟಿರುವುದು ತೀವ್ರ ಕುತೂಹಲ ಮೂಡಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವನ್ನು ಎಐಸಿಸಿ ರೂಪಿಸಿತ್ತು. ಅದರಂತೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗು ಕೇಳಿ ಬಂದಿತ್ತು. ಈ ಮಧ್ಯೆ ಸಚಿವ ಕೆ.ಎನ್. ರಾಜಣ್ಣ ಅವರು ಕೆಪಿಸಿಸಿ ಹುದ್ದೆ ನೀಡುವುದಾದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದು ಹೇಳಿದ್ದರು. ಕ್ರಮೇಣ ಅಧ್ಯಕ್ಷ ಹುದ್ದೆಯ ರೇಸ್‌ನಿಂದ ಹಿಂದೆ ಸರಿದಿದ್ದರು.