ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ
ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಮೇಲೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.
ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಮೇಲೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.
ಗುತ್ತಿಗೆದಾರನಿಗೆ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ ಸಂಬಂಧ ಬಂಧಿತರಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಮುನಿರತ್ನ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಮುಂದೆ ವೈಯಾಲಿಕಾವಲ್ ಠಾಣೆ ಪೊಲೀಸರು ಹಾಜರುಪಡಿಸಿದ್ದರು.
ಈ ವೇಳೆ ಪ್ರಕರಣದ ತನಿಖೆಗಾಗಿ ಮುನಿರತ್ನ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಕೋರಿದ್ದರು. ಆದರೆ, ಮುನಿರತ್ನ ಪರ ವಕೀಲ ಅಶೋಕ್ ಹಾರನಳ್ಳಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿ, ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ, ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ ಮಾಡಿದ ನ್ಯಾಯಾಲಯ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆ ಹಿನ್ನೆಲೆಯಲ್ಲಿ ಮುನಿರತ್ನನನ್ನು ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.