
ಕೋವಿಡ್ ಅವ್ಯವಹಾರ ತನಿಖೆ: ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಕೆ
ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದ ಸಂದರ್ಭದಲ್ಲಿ, ಕೋವಿಡ್ ಸಾಂಕ್ರಾಮಿಕದ ನಿರ್ವಹಣೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.
ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಕೋವಿಡ್ ಕಾಲದ ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರ ಮತ್ತು ಸಾವಿನ ಲೆಕ್ಕಾಚಾರಕ್ಕೆ ಸಂಬಂಧಿಸಿದಂತೆ, ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ ತನಿಖಾ ಆಯೋಗವು ತನ್ನ ಅಂತಿಮ ವರದಿಯನ್ನು ಇಂದು (ಡಿಸಂಬರ್ 31) ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿಯನ್ನು ಸ್ವೀಕರಿಸಿದರು.
ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದ ಸಂದರ್ಭದಲ್ಲಿ, ಕೋವಿಡ್ ಸಾಂಕ್ರಾಮಿಕದ ನಿರ್ವಹಣೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗವನ್ನು ರಚಿಸಿತ್ತು
ಆಯೋಗವು ಈಗಾಗಲೇ 2024ರ ಆಗಸ್ಟ್ 31ರಂದು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು. ಆ ವರದಿಯಲ್ಲಿ, ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ (ಕಾನೂನು ಕ್ರಮಕ್ಕೆ) ಶಿಫಾರಸು ಮಾಡಲಾಗಿತ್ತು ಎಂಬ ಮಾಹಿತಿಯೂ ಲಭ್ಯವಾಗಿತ್ತು. ಚೀನಾ ಮತ್ತು ಹಾಂಕಾಂಗ್‌ನಿಂದ ದುಬಾರಿ ದರದಲ್ಲಿ ಪಿಪಿಇ ಕಿಟ್ ಮತ್ತು ಇತರೆ ಉಪಕರಣಗಳನ್ನು ಖರೀದಿಸಿದ ಆರೋಪದ ಮೇಲೆ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸಲು ಆಯೋಗ ಶಿಫಾರಸು ಮಾಡಿತ್ತು ಎಂದು ಮೂಲಗಳು ತಿಳಿಸಿವೆ.

