ಕಲ್ಯಾಣ ಕರ್ನಾಟಕದಲ್ಲಿ ಕೈ ಮೇಲುಗೈ; ವಿಶೇಷ ಅನುದಾನಕ್ಕೆ ಸಿದ್ದರಾಮಯ್ಯ ಸೂಚನೆ
x

ಕಲ್ಯಾಣ ಕರ್ನಾಟಕದಲ್ಲಿ ಕೈ ಮೇಲುಗೈ; ವಿಶೇಷ ಅನುದಾನಕ್ಕೆ ಸಿದ್ದರಾಮಯ್ಯ ಸೂಚನೆ


ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಪ್ರಮುಖ ಕಾರಣವಾಗಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿನಿಧಿಸುವ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ವರ್ಷಕ್ಕೆ 5,000 ಕೋಟಿ ರೂ. ಅನುದಾನ ಸಂಬಂಧ ಕ್ರಿಯಾಯೋಜನೆ ಸಿದ್ಧಪಡಿಸಲು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿನಿಧಿಸುವ ಹಳೆ ಮೈಸೂರು, ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು, ಖರ್ಗೆ ಪ್ರತಿನಿಧಿಸುವ ಮತ್ತು ಅವರು ಕೇಂದ್ರ ಸಚಿವರಾಗಿದ್ದಾಗ ವಿಶೇಷ ಸ್ಥಾನಮಾನ ಸಿಕ್ಕಿದ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಐದು ಲೋಕಸಭಾ ಕ್ಷೇತ್ರಗಳು ಈ ಬಾರಿ ಕಾಂಗ್ರೆಸ್ ಪಾಲಾಗಿವೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸುವ ಸಂಬಂಧ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಸಭೆ ಕರೆದು ವಿವಿಧ ಯೋಜನೆಗಳ ಪ್ರಗತಿ ಕುರಿತಂತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದ್ದು, ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು

ಜತೆಗೆ ಅನುಮೋದನೆಯಾದ ಟೆಂಡರ್ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆಯಬೇಕು , ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.

ಒಟ್ಟು 14,228 ಕೋಟಿ ರೂ. ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು . ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಇದೇ ಸಂದರ್ಭದಲ್ಲಿ ಸೂಚಿಸಲಾಯಿತು. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು; ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು; ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು; ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆದ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು

ಇತರ ಸೂಚನೆಗಳು

  • ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಗಮನದಲ್ಲಿ ಇಟ್ಟುಕೊಂಡು ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಕಾಣುವ ರೀತಿಯಲ್ಲಿ ಫಲಿತಾಂಶ ಬರುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುವುದು.
  • ಕಲ್ಯಾಣ ಕರ್ನಾಟಕ ಭಾಗದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳನ್ನು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು
  • ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು
  • ಹಾಸ್ಟೆಲುಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು
  • ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು
  • ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡಬೇಕು.
  • ಸಿ.ಎಸ್.ಆರ್. ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು .
  • ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದ್ದು, ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸಬೇಕು.
Read More
Next Story