
Belagavi Session| ಒಂದೇ ಒಂದು ಕನ್ನಡ ಶಾಲೆ ಮುಚ್ಚಲ್ಲ; ನಮ್ಮ ರಕ್ತದಲ್ಲೇ ಕನ್ನಡವಿದೆ - ಮಧು ಬಂಗಾರಪ್ಪ
ರಾಜ್ಯದ ಶೈಕ್ಷಣಿಕ ಚಿತ್ರಣವನ್ನೇ ಬದಲಿಸುವ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೊಂದು ಕೆಪಿಎಸ್ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
"ನಮ್ಮ ರಕ್ತದಲ್ಲೇ ಕನ್ನಡವಿದೆ. ರಾಜ್ಯದಲ್ಲಿ ಯಾವುದೇ ಕನ್ನಡ ಮಾಧ್ಯಮದ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. ಅಲ್ಲದೆ, ಗ್ರಾಮೀಣ ಭಾಗದ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮಹತ್ವದ ಯೋಜನೆ ಪ್ರಕಟಿಸಿದರು.
ರಾಜ್ಯದ ಶೈಕ್ಷಣಿಕ ಚಿತ್ರಣವನ್ನೇ ಬದಲಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಒಂದೊಂದು 'ಕರ್ನಾಟಕ ಪಬ್ಲಿಕ್ ಶಾಲೆ' (ಕೆಪಿಎಸ್) ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. 2025-26ನೇ ಸಾಲಿನಲ್ಲಿಯೇ ಸುಮಾರು 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಬಜೆಟ್‌ನಲ್ಲಿ ಈಗಾಗಲೇ 500 ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಘೋಷಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಗಳಿಗೆ ಉತ್ತಮ ಬೇಡಿಕೆ ಇದೆ ಎಂದು ತಿಳಿಸಿದರು.
ಶಿಕ್ಷಕರ ನೇಮಕ ಮತ್ತು ವರ್ಗಾವಣೆ
ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸದ್ಯ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅದು ಪೂರ್ಣಗೊಂಡ ನಂತರ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಮಾಡಿ, ಕೆಪಿಎಸ್ ಶಾಲೆಗಳ ಖಾಲಿ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕೆಪಿಎಸ್ ಶಾಲೆಗಳಿಗೆ 'ಉತ್ತಮ ಕಲಿಕೆ, ಉಜ್ವಲ ಭವಿಷ್ಯ' ಎಂಬ ಧ್ಯೇಯವಾಕ್ಯ ನಿಗದಿಪಡಿಸಲಾಗಿದೆ. ಏಕರೂಪದ ಗುಣಮಟ್ಟ ಕಾಯ್ದುಕೊಳ್ಳಲು 'ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು' ಎಂಬ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಇದರನ್ವಯ ಪ್ರತಿ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಶೈಕ್ಷಣಿಕ ಮತ್ತು ಭೌತಿಕ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

