ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ: ಕೇಂದ್ರ ವಿತ್ತ ಸಚಿವೆಗೆ ಪತ್ರ ಬರೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
x
ಡಾ. ಪುರುಷೋತ್ತಮ ಬಿಳಿಮಲೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ: ಕೇಂದ್ರ ವಿತ್ತ ಸಚಿವೆಗೆ ಪತ್ರ ಬರೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಕೇಂದ್ರ ಸರ್ಕಾರದ ಅಧೀನದ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಅನಗತ್ಯ ಹಿಂದಿ ಹೇರಿಕೆಯು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ವಿರುದ್ಧವಾಗಿದೆ. ದಕ್ಷಿಣ ಭಾರತದ ರಾಜ್ಯಗಳ ಜನರು ಹಿಂದಿ ಹೇರಿಕೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.


ರಾಜ್ಯದ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕಡ್ಡಾಯ ಕನ್ನಡ ಭಾಷೆ ಬಳಕೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರದ ಅಧೀನದ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಅನಗತ್ಯ ಹಿಂದಿ ಹೇರಿಕೆಯು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ವಿರುದ್ಧವಾಗಿದೆ. ದಕ್ಷಿಣ ಭಾರತದ ರಾಜ್ಯಗಳ ಜನರು ಹಿಂದಿ ಹೇರಿಕೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಬ್ಯಾಂಕುಗಳಿಗೆ ಸಿಬ್ಬಂದಿ ನೇಮಕ ಮಾಡುವಾಗ ಸ್ಥಳೀಯ ಭಾಷೆಗಳಲ್ಲಿ ಸಂವಹನ ಕೌಶಲ್ಯ ಹೊಂದಿರುವವರಿಗೆ ಆದ್ಯತೆ ನೀಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

ಬ್ಯಾಂಕ್ ಕೆಲಸಗಳಿಗೆ ಬರುವವರ ಬಳಿ ಇಂಗ್ಲಿಷ್ ಹಾಗೂ ಹಿಂದಿ ಮಾತಾಡುವುದರಿಂದ ಅವರಿಗೆ ಸಮಸ್ಯೆಯಾಗುತ್ತಿದೆ. ಎರಡು ವರ್ಷಗಳ ಹಿಂದೆ ಬ್ಯಾಂಕ್ ಸಿಬ್ಬಂದಿಯ ಅನುಚಿತ ವರ್ತನೆಯಿಂದ ಗ್ರಾಹಕರ ಜೊತೆ ಘರ್ಷಣೆಗಳಾಗಿರುವ ಸಾಕಷ್ಟು ನಿದರ್ಶನಗಳಿವೆ. ಬ್ಯಾಂಕುಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬಳಕೆಗೆ ಒತ್ತಾಯಿಸಿ ರಾಜ್ಯದ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೂ ಈವರೆಗೂ ಕನ್ನಡ ಬಳಸದಿರುವುದು ಬೇಸರ ತರಿಸಿದೆ ಎಂದು ಹೇಳಿದ್ದಾರೆ.

ನೆಲದ ಭಾಷೆಯಲ್ಲೇ ಸೇವೆ ಪಡೆಯುವುದು ರಾಜ್ಯಗಳ ಹಕ್ಕು ಮಾತ್ರವಲ್ಲ, ಸಂವಿಧಾನದ ಒಕ್ಕೂಟ ವ್ಯವಸ್ಥೆ ಹಾಗೂ ಸಾಂಸ್ಕೃತಿಕ ಮೌಲ್ಯ ಗೌರವಿಸುವುದೂ ಆಗಿದೆ. ಹಿಂದಿ ಹೇರಿಕೆಯು ದಕ್ಷಿಣ ಭಾರತದ ರಾಜ್ಯಗಳನ್ನು ಆತಂಕಕ್ಕೆ ದೂಡಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಲು ತಾವು ಸಕಾರಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Read More
Next Story