ನೀಟ್, ಒಂದು ರಾಷ್ಟ್ರ, ಒಂದು ಚುನಾವಣೆ, ಕ್ಷೇತ್ರ ಪುನರ್‌ ವಿಂಗಡಣೆ ವಿರುದ್ಧ ನಿರ್ಣಯಕ್ಕೆ ಸಮ್ಮತಿ
x

ನೀಟ್, 'ಒಂದು ರಾಷ್ಟ್ರ, ಒಂದು ಚುನಾವಣೆ', ಕ್ಷೇತ್ರ ಪುನರ್‌ ವಿಂಗಡಣೆ ವಿರುದ್ಧ ನಿರ್ಣಯಕ್ಕೆ ಸಮ್ಮತಿ


ಬೆಂಗಳೂರು, ಜು.23 - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ರಾತ್ರಿ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ವಿರುದ್ಧದ ನಿರ್ಣಯ ಸೇರಿದಂತೆ ಮೂರು ನಿರ್ಣಯಗಳನ್ನು ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಮತ್ತು ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳ ಕ್ಷೇತ್ರಗಳ ಪುನರ್ ವಿಂಗಡಣೆ‌ ವಿರುದ್ಧ ಇನ್ನೆರಡು ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ನಿರ್ಣಯಗಳನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಗಳವಾರವೇ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಂಪುಟ 'ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ 2024' ಅನ್ನು ಕೂಡ ಅಂಗೀಕರಿಸಿದೆ. ಬಿಬಿಎಂಪಿಯನ್ನು ಪುನಾರಚಿಸಲು ರಚಿಸಿದ್ದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ್ ನೇತೃತ್ವದ ನಾಲ್ವರು ಸದಸ್ಯರ ಸಮಿತಿಯು ಈ ತಿಂಗಳ ಆರಂಭದಲ್ಲಿ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿತ್ತು.

ನಗರದ ಆಡಳಿತ ಮತ್ತು ಆರ್ಥಿಕ ಅಧಿಕಾರಗಳೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯನ್ನು ಸಮಿತಿ ಪ್ರಸ್ತಾಪಿಸಿದೆ. ಬಹು ಸಂಖ್ಯೆಯ ಪಾಲಿಕೆಗಳಲ್ಲದೆ, 400 ವಾರ್ಡ್‌ಗಳ ರಚನೆಗೆ ಅವಕಾಶ ನೀಡುತ್ತದೆ.

ನೀಟ್‌ ವಿವಾದದ ನಡುವೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ರಾಜ್ಯಗಳು ತಮ್ಮದೇ ಆದ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಿದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರವ್ಯಾಪಿ ಒಮ್ಮೆಲೇ ಚುನಾವಣೆ ನಡೆಸುವ ಕುರಿತು 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ತನ್ನ ವರದಿಯನ್ನು ಮಾರ್ಚ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.

2024 ರ ಲೋಕಸಭೆ ಚುನಾವಣೆ ನಂತರ ಜನಗಣತಿ ಮತ್ತು ಕ್ಷೇತ್ರಗಳ ಪುನರ್ ವಿಂಗಡಣೆ‌ ಪ್ರಕ್ರಿಯೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಹಿಂದೆ ಹೇಳಿದ್ದರು.

Read More
Next Story