ಫೆ. 10ರೊಳಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಕೆ: ಶಿವರಾಜ್ ಎಸ್. ತಂಗಡಗಿ
x

 ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಶಿವರಾಜ ತಂಗಡಗಿ ಮತ್ತಿತರರು ಪಾಲ್ಗೊಂಡಿದ್ದರು. 

ಫೆ. 10ರೊಳಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಕೆ: ಶಿವರಾಜ್ ಎಸ್. ತಂಗಡಗಿ

ಈ ವರದಿಯಿಂದಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಅವರಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


Click the Play button to hear this message in audio format

ಮಧುಸೂದನ್ ನಾಯಕ್ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಜನವರಿ ಅಂತ್ಯದ ವೇಳೆಗೆ ಅಥವಾ ಫೆಬ್ರವರಿ 10ರೊಳಗೆ ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.

ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿಯನ್ನು ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಉದ್ಘಾಟಿಸಿ ಮಾತನಾಡಿದ ಸಚಿವರು, ಈಗಾಗಲೇ ಅಂಕಿ-ಅಂಶಗಳ ಕ್ರೋಢೀಕರಣ ಕಾರ್ಯ ಭರದಿಂದ ಸಾಗಿದ್ದು, ಶೀಘ್ರದಲ್ಲೇ ವರದಿ ಸಲ್ಲಿಕೆಯಾಗಲಿದೆ ಎಂದರು.

ಈ ವರದಿಯಿಂದಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಅವರಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ವರದಿಯು ವಿವಿಧ ಸಮುದಾಯಗಳ ವಾಸ್ತವಿಕ ಜನಸಂಖ್ಯೆ ಮತ್ತು ಸ್ಥಿತಿಗತಿಗಳ ಬಗ್ಗೆ ಸ್ಪಷ್ಟ ಚಿತ್ರಣ ನೀಡಲಿದೆ ಎಂದರು.

18 ಸಾವಿರ ಕೊಳವೆ ಬಾವಿ, ವಿದೇಶಿ ವ್ಯಾಸಂಗಕ್ಕೆ 50 ಲಕ್ಷ ರೂ. ಸಾಲ

ಹಿಂದಿನ ಸರ್ಕಾರಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ಕೇವಲ 5 ಕೋಟಿ ರೂ. ಅನುದಾನ ನೀಡುತ್ತಿದ್ದವು. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಬಗ್ಗೆ ವಿಶೇಷ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳು ಇಲಾಖೆಯ ನಿಗಮಗಳಿಗೆ ಒಟ್ಟು 1,600 ಕೋಟಿ ರೂ. ಅನುದಾನ ನೀಡಿದ್ದಾರೆ. ಈ ಪೈಕಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 23.24 ಕೋಟಿ ರೂ. ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಹಿಂದಿನ ಸರ್ಕಾರ ಮೂರೂವರೆ ವರ್ಷಗಳಲ್ಲಿ ಈ ಯೋಜನೆಯಡಿ ಒಂದೇ ಒಂದು ಕೊಳವೆ ಬಾವಿ ಕೊರೆಯಿಸಿರಲಿಲ್ಲ. ಆದರೆ, ತಾವು ಸಚಿವರಾದ ನಂತರ 18,000 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಅಲ್ಲದೆ, ಘಟಕದ ವೆಚ್ಚವನ್ನು 2.50 ಲಕ್ಷ ರೂ.ನಿಂದ 3.75 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುತ್ತಿದ್ದ ಸಾಲದ ಮೊತ್ತವನ್ನು 20 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದ್ದು, ಇದನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯ ಪ್ರತಿಮೆ

ನಿಷ್ಠುರ ಮಾನವತಾವಾದಿ ಅಂಬಿಗರ ಚೌಡಯ್ಯ ಅವರ ಸ್ಮರಣಾರ್ಥ ಬೆಂಗಳೂರಿನಲ್ಲಿ ಅವರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಸಚಿವರು ಘೋಷಿಸಿದರು. ಇದಕ್ಕಾಗಿ ಸೂಕ್ತ ಸ್ಥಳದ ಹುಡುಕಾಟ ನಡೆದಿದ್ದು, ಸ್ಥಳ ನಿಗದಿಯಾದ ಕೂಡಲೇ ಇಲಾಖೆಯ ವತಿಯಿಂದ ಪ್ರತಿಮೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಂಬಿಗರ ಚೌಡಯ್ಯನವರ ಕೊಡುಗೆ ಸ್ಮರಣೆ

12ನೇ ಶತಮಾನದ ವಚನ ಚಳವಳಿಯಲ್ಲಿ ಅಂಬಿಗರ ಚೌಡಯ್ಯನವರದು ಅಗ್ರಸ್ಥಾನ. ಶೋಷಿತ ಸಮುದಾಯದಲ್ಲಿ ಹುಟ್ಟಿ ಬೆಳೆದ ಅವರು ಸಮಾಜದ ಓರೆಕೋರೆಗಳನ್ನು, ಧಾರ್ಮಿಕ ಮೌಢ್ಯಗಳನ್ನು ಮತ್ತು ಲಿಂಗ ತಾರತಮ್ಯವನ್ನು ತಮ್ಮ ವಚನಗಳ ಮೂಲಕ ನಿಷ್ಠುರವಾಗಿ ಖಂಡಿಸಿದ್ದರು ಎಂದು ಸಚಿವರು ಸ್ಮರಿಸಿದರು. ಇದೇ ವೇಳೆ, ಯಾವುದೇ ಜಿಲ್ಲೆಯಲ್ಲಿ ಜಯಂತಿ ಆಚರಣೆ ಮಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ರೇಷ್ಮೆ ಮಾರುಕಟ್ಟೆ ಮಂಡಳಿ ಅಧ್ಯಕ್ಷ ಗಂಗಾಧರ್, ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ. ಮಾನಸ, ಇಲಾಖೆ ಕಾರ್ಯದರ್ಶಿ ಜೆ. ಮಂಜುನಾಥ್, ನಿರ್ದೇಶಕಿ ಕೆ.ಎಂ. ಗಾಯಿತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More
Next Story