
ಸಾಂದರ್ಭಿಕ ಚಿತ್ರ
ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಅವರು ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ, ಸರ್ಕಾರದ ಈ ಕ್ರಮವು ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದೆ ಎಂದು ವಾದಿಸಲಾಗಿತ್ತು.
ಮಹಿಳಾ ಉದ್ಯೋಗಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ 'ಮುಟ್ಟಿನ ರಜೆ' (Menstrual Leave) ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿವಿಧ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.
ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಅವರು ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ, ಸರ್ಕಾರದ ಈ ಕ್ರಮವು ಸಂವಿಧಾನದ 14ನೇ ವಿಧಿಗೆ (ಸಮಾನತೆಯ ಹಕ್ಕು) ವಿರುದ್ಧವಾಗಿದೆ ಮತ್ತು ಇದು ಅಸಾಂವಿಧಾನಿಕ ಎಂದು ವಾದಿಸಲಾಗಿತ್ತು. ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ಪೀಠ, ಅರ್ಜಿದಾರರ ಪರ ವಕೀಲರ ವಾದವನ್ನು ಆಲಿಸಿ, ಸರ್ಕಾರದ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೆ, ಈ ಸಂಬಂಧ ರಾಜ್ಯ ಸರ್ಕಾರದ ಪರ ವಕೀಲರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
ಸರ್ಕಾರದ ಆದೇಶವೇನಿತ್ತು?
ಮಹಿಳಾ ಉದ್ಯೋಗಿಗಳ ಆರೋಗ್ಯ ಮತ್ತು ಕ್ಷೇಮವನ್ನು ಗಮನದಲ್ಲಿಟ್ಟುಕೊಂಡು, ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಾಯಿತವಾಗಿರುವ ಎಲ್ಲಾ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ, ಅವರ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಬೇಕು ಎಂದು ರಾಜ್ಯ ಕಾರ್ಮಿಕ ಇಲಾಖೆಯು ನವೆಂಬರ್ 20ರಂದು ಅಧಿಸೂಚನೆ ಹೊರಡಿಸಿತ್ತು.
ಸಚಿವ ಸಂಪುಟದ ನಿರ್ಧಾರ
ಈ ಆದೇಶಕ್ಕೂ ಮುನ್ನ, ಆಗಸ್ಟ್ 2024ರಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದ ಇಲಾಖೆಯು ಮಹಿಳಾ ಸ್ನೇಹಿ ಕೆಲಸದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಈ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಖಾಸಗಿ ವಲಯ, ಐಟಿ-ಬಿಟಿ ಕಂಪನಿಗಳು, ಗಾರ್ಮೆಂಟ್ಸ್, ಹೋಟೆಲ್ ಉದ್ಯಮ ಸೇರಿದಂತೆ ಸಂಘಟಿತ ವಲಯದ ಲಕ್ಷಾಂತರ ಮಹಿಳಾ ಉದ್ಯೋಗಿಗಳಿಗೆ ಇದು ಅನ್ವಯವಾಗುವಂತಿತ್ತು. ಬಿಹಾರ ಮತ್ತು ಕೇರಳ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಮುಟ್ಟಿನ ರಜೆ ಜಾರಿಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿತ್ತು.
ಹೈಕೋರ್ಟ್ ತಡೆಯಾಜ್ಞೆಯಿಂದಾಗಿ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ ತಾತ್ಕಾಲಿಕ ಹಿನ್ನಡೆಯುಂಟಾಗಿದೆ. ಮುಂದಿನ ವಿಚಾರಣೆಯಲ್ಲಿ ಸರ್ಕಾರ ಯಾವ ರೀತಿಯ ಸಮರ್ಥನೆ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

