ಹಾಸನದಲ್ಲಿ ಗಣೇಶ ಮೆರವಣಿಗೆ ಮೇಲೆ ನುಗ್ಗಿದ ಲಾರಿ; ಹಲವರ ಸಾವು, ಗಣ್ಯರ ಸಂತಾಪ
x

ಹಾಸನದಲ್ಲಿ ಗಣೇಶ ಮೆರವಣಿಗೆ ಮೇಲೆ ನುಗ್ಗಿದ ಲಾರಿ; ಹಲವರ ಸಾವು, ಗಣ್ಯರ ಸಂತಾಪ

ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳು, "ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.


ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ರಾಜ್ಯದಾದ್ಯಂತ ತೀವ್ರ ಆಘಾತ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ದುಃಖ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, "ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ," ಎಂದು ಸಂತಾಪ ಸೂಚಿಸಿದ್ದಾರೆ.

ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳು, "ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ," ಎಂದು ಭರವಸೆ ನೀಡಿದ್ದಾರೆ.

ಕೇಂದ್ರ ಸಚಿವರಿಂದ ಸಂತಾಪ

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರೂ ಸಹ ಘಟನೆಯ ಬಗ್ಗೆ ಟ್ವೀಟ್ (X) ಮೂಲಕ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

"ಹಾಸನದ ಮೊಸಳೆಹೊಸಳ್ಳಿ ಬಳಿ ನಡೆದ ಅಪಘಾತದ ವಿಷಯ ತೀರ ದುಃಖಕರ. ಗಣಪತಿ ವಿಸರ್ಜನೆಯ ವೇಳೆ ನಡೆದ ಈ ಘಟನೆ ನಿಜಕ್ಕೂ ಆಘಾತ ತಂದಿದೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ," ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, "ಈ ಭೀಕರ ಅಪಘಾತದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಅನೇಕ ಭಕ್ತರು ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ರಾಜ್ಯ ಸರ್ಕಾರವು ಗಾಯಾಳುಗಳಿಗೆ ಉತ್ತಮ ಹಾಗೂ ಉಚಿತ ಚಿಕಿತ್ಸೆ ನೀಡಬೇಕು," ಎಂದು ಆಗ್ರಹಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ರಾತ್ರಿ ಭೇಟಿ

ಈ ದುರಂತದ ಹಿನ್ನೆಲೆಯಲ್ಲಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ರಾತ್ರಿಯೇ ಬಾಧಿತರನ್ನು ಭೇಟಿಯಾಗಲಿದ್ದಾರೆ. ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ನಂತರ ಗಾಯಾಳುಗಳನ್ನು ದಾಖಲಿಸಲಾಗಿರುವ ಆಸ್ಪತ್ರೆಗೂ ತೆರಳಿ, ಸಂತ್ರಸ್ತರ ಕುಟುಂಬಗಳಿಗೆ ಧೈರ್ಯ ತುಂಬಲಿದ್ದಾರೆ ಎಂದು ತಿಳಿದುಬಂದಿದೆ.

Read More
Next Story