ರಾಜ್ಯದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಮತ್ತು ದೇವದಾಸಿ ಮಹಿಳೆಯರ ಸಮೀಕ್ಷೆಗೆ ಸಿದ್ದತೆ
x

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಿದರು.

ರಾಜ್ಯದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಮತ್ತು ದೇವದಾಸಿ ಮಹಿಳೆಯರ ಸಮೀಕ್ಷೆಗೆ ಸಿದ್ದತೆ

ರಾಜ್ಯಾದ್ಯಂತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮೀಕ್ಷೆ ನಡೆಯಲಿದೆ.


Click the Play button to hear this message in audio format

ರಾಜ್ಯ ಸರ್ಕಾರವು ಸೆಪ್ಟೆಂಬರ್ 15ರಿಂದ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ದೇವದಾಸಿ ಮಹಿಳೆಯರ ಸಮೀಕ್ಷೆ ನಡೆಸಲು ನಿರ್ಧರಿಸಿದೆ.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಸಮೀಕ್ಷೆಗಳ ಉದ್ದೇಶ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ದೇವದಾಸಿ ಮಹಿಳೆಯರ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ, ಅವರಿಗೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪುನರ್ವಸತಿ ಒದಗಿಸುವುದಾಗಿದೆ ಎಂದು ತಿಳಿಸಿದೆ.

ರಾಜ್ಯಾದ್ಯಂತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಯನ್ನು ತೃತೀಯ ಲಿಂಗಿಗಳೇ ನಡೆಸಲಿದ್ದು, ಮೊಬೈಲ್ ಅಪ್ಲಿಕೇಶನ್ ಮೂಲಕ ಮಾಹಿತಿಯನ್ನು ದಾಖಲಿಸಲಾಗುತ್ತದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಪ್ರತಿನಿಧಿಗಳು ಈ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೇವದಾಸಿ ಮಹಿಳೆಯರ ಮರುಸಮೀಕ್ಷೆ 15 ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಜರುಗಲಿದೆ. ಈ ಸಮೀಕ್ಷೆಯನ್ನು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿಗಳಲ್ಲಿ ನಡೆಸಲಾಗುವುದು. ದೇವದಾಸಿ ಪುನರ್ವಸತಿ ಯೋಜನಾ ಘಟಕದ ಅಧಿಕಾರಿ ಮಟ್ಟದ ಸಿಬ್ಬಂದಿ ಸಮೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

ಈ ಎರಡೂ ಸಮೀಕ್ಷೆಗಳನ್ನು 45 ದಿನಗಳಲ್ಲಿ ಪೂರ್ಣಗೊಳಿಸಲಾಗುವುದಾಗಿ ಪ್ರಕಟಣೆ ತಿಳಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮೀಕ್ಷೆಯ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಸಮೀಕ್ಷೆಗಳು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ನಡೆಯಲಿವೆ.

Read More
Next Story