ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕ್ಷರ ನೇಮಕ: ಮಧು ಬಂಗಾರಪ್ಪ
x

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕ್ಷರ ನೇಮಕ: ಮಧು ಬಂಗಾರಪ್ಪ

ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು.


Click the Play button to hear this message in audio format

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬೋಧಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದ ಆರಂಭದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಮತ್ತು ಪ್ರಸ್ತುತ ಕೈಗೊಂಡಿರುವ ಕ್ರಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದನದ ಮುಂದಿಟ್ಟರು.

ರಾಜ್ಯದಲ್ಲಿ ಒಟ್ಟು 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಇವುಗಳಿಗೆ ಮಂಜೂರಾಗಿರುವ 1,78,935 ಹುದ್ದೆಗಳ ಪೈಕಿ 1,33,345 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಪ್ರಾಥಮಿಕ ಶಾಲಾ ವಿಭಾಗದಲ್ಲಿ 45,590 ಹುದ್ದೆಗಳು ಖಾಲಿ ಇವೆ. ಅದೇ ರೀತಿ ರಾಜ್ಯದ 5,024 ಸರ್ಕಾರಿ ಪ್ರೌಢಶಾಲೆಗಳಲ್ಲಿ ಮಂಜೂರಾದ 44,144 ಹುದ್ದೆಗಳ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು, 12,134 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ಸಚಿವರು ಅಂಕಿಅಂಶ ಸಹಿತ ವಿವರಿಸಿದರು. ಖಾಲಿ ಇರುವ ಈ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ಈಗಾಗಲೇ ಕ್ರಮ ವಹಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕಲಿಕೆಗೆ ತೊಂದರೆ ಇಲ್ಲ

ಕಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುವರೆಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಪ್ರಾಥಮಿಕ ಶಾಲೆಗಳಲ್ಲಿ 40,000 ಹಾಗೂ ಪ್ರೌಢಶಾಲೆಗಳಲ್ಲಿ 11,000 ಸೇರಿದಂತೆ ಒಟ್ಟು 51,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಇದರ ಮೂಲಕ ಶಿಕ್ಷಕರ ಕೊರತೆಯನ್ನು ತಾತ್ಕಾಲಿಕವಾಗಿ ಸರಿದೂಗಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದಲ್ಲದೆ, ವಿಕಲಚೇತನ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನೂ ನೇಮಕ ಮಾಡಿಕೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ಸದನಕ್ಕೆ ಮಾಹಿತಿ ನೀಡಿದರು.

Read More
Next Story