
ಸಚಿವ ಭೈರತಿ ಸುರೇಶ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ರಾಜ್ಯದ ಕೆರೆ-ಉದ್ಯಾನಗಳಿಗೆ ಹೊಸ ಕಳೆ: ನವೆಂಬರ್ ಅಂತ್ಯದೊಳಗೆ ಟೆಂಡರ್ ಮುಗಿಸಲು ಸಚಿವರ ಗಡುವು
"ಈಗಾಗಲೇ ಡಿಪಿಆರ್ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣವೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸಿ, ಕಾನೂನು ಕ್ರಮ ಕೈಗೊಳ್ಳಿ" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆ ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ. ಅಮೃತ್ 2.0 ಯೋಜನೆಯಡಿ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ, ನವೆಂಬರ್ ಅಂತ್ಯದೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ವಿಧಿಸಿದ್ದಾರೆ.
ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ 12 ಮಹಾನಗರ ಪಾಲಿಕೆಗಳ ಆಯುಕ್ತರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಲ್ಲಿ ವಿಳಂಬ ಮಾಡುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸೂಚಿಸಿದರು. "ಈಗಾಗಲೇ ಡಿಪಿಆರ್ ಪೂರ್ಣಗೊಂಡಿರುವ ಕಡೆಗಳಲ್ಲಿ ತಕ್ಷಣವೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ದಂಡ ವಿಧಿಸಿ, ಕಾನೂನು ಕ್ರಮ ಕೈಗೊಳ್ಳಿ" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಯೋಜನೆಯಡಿ, ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ 12 ಮಹಾನಗರ ಪಾಲಿಕೆಗಳಲ್ಲಿ ಒಟ್ಟು 85 ಉದ್ಯಾನವನಗಳು ಮತ್ತು 48 ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ಈ ಮೂಲಕ ನಗರ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.