
ಕೇರಳದ 'ಮಲಯಾಳಂ ಭಾಷಾ ಮಸೂದೆ': ಪಿಣರಾಯ್ ವಿಜಯನ್ ನಡೆಗೆ ಸಿದ್ದರಾಮಯ್ಯ ಆಕ್ಷೇಪ
ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆಯಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾಪಿತ 'ಮಲಯಾಳಂ ಭಾಷಾ ಮಸೂದೆ-2025'ಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯು ಸಂವಿಧಾನ ಖಾತರಿಪಡಿಸಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ನೇರ ಪ್ರಹಾರವಾಗಿದ್ದು, ಕೂಡಲೇ ಇದನ್ನು ಹಿಂದೆಗೆದುಕೊಳ್ಳುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಈ ಕಾನೂನು ಜಾರಿಗೆ ಬಂದರೆ, ಗಡಿಜಿಲ್ಲೆಗಳಲ್ಲಿ, ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ತಮ್ಮ ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದಲೇ ವಂಚಿತರಾಗಲಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಭಾವನಾತ್ಮಕವಾಗಿ ಕಾಸರಗೋಡು ಕರ್ನಾಟಕದ್ದೇ
ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ, ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ ಪ್ರದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಅಲ್ಲಿನ ಜನರು ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯದೊಂದಿಗೆ ಬೆರೆತುಹೋಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಯಾವತ್ತೂ ಕಡಿಮೆ ಕನ್ನಡಿಗರಲ್ಲ. ಹೀಗಾಗಿ ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವಿದೆ ಎಂದು ಅವರು ಹೇಳಿದ್ದಾರೆ.
ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆಯಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ಮಕ್ಕಳು ಮಾತೃಭಾಷೆಯಲ್ಲಿ ಕಲಿಯುವಾಗ ವಿಷಯಗಳನ್ನು ಸುಲಭವಾಗಿ ಗ್ರಹಿಸುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಇಂತಹ ಸನ್ನಿವೇಶದಲ್ಲಿ ಮಕ್ಕಳ ಮೇಲೆ ಅನ್ಯ ಭಾಷೆಯನ್ನು ಹೇರುವುದು ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದಲ್ಲದೆ, ಒಂದು ಸ್ವತಂತ್ರ ಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಸಂವಿಧಾನದ 29 ಮತ್ತು 30ನೇ ಪರಿಚ್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿವೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ಸಂವಿಧಾನದ 350(ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದರೆ, 350(ಬಿ) ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು ಎಂದು ಅವರು ಪಾಠ ಮಾಡಿದ್ದಾರೆ.
ಭಾಷೆಯನ್ನು ಹೇರಬೇಡಿ ಎಂದು ಸಿಎಂ
ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಪೋಷಿಸುವಂತೆಯೇ, ಕೇರಳದಲ್ಲಿ ಮಲಯಾಳಂ ಭಾಷೆಯನ್ನು ಬೆಳೆಸುವ ಸರ್ವ ಸ್ವಾತಂತ್ರ್ಯ ಅಲ್ಲಿನ ಸರ್ಕಾರಕ್ಕಿದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು. ಭಾರತ ಬಹುಭಾಷೆ ಮತ್ತು ಬಹುಸಂಸ್ಕೃತಿಯ ತೊಟ್ಟಿಲಾಗಿದ್ದು, ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನ ಅಪಾಯಕಾರಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಮುಂದಾದರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಕರ್ನಾಟಕ ಸರ್ಕಾರ ಸರ್ವರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

