Siddaramaiahs special session drama to retain his chair: B.Y. Vijayendra Kidi
x

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ 

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ವಿಶೇಷ ಅಧಿವೇಶನದ ನಾಟಕ: ಬಿ.ವೈ. ವಿಜಯೇಂದ್ರ

ನಾಡಿನ ಜನರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟುವುದಕ್ಕೆ ಬಳಸುತ್ತಿರುವುದನ್ನು ಖಂಡನೀಯ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.


Click the Play button to hear this message in audio format

ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಬಗ್ಗೆ ಪದೇ ಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ(ಜ.16) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಧಾರಣೆಗಳನ್ನು ಮಾಡಿ, ಮನರೇಗಾವನ್ನು ವಿಬಿ ಜಿ ರಾಮ್ ಜಿ ಯೋಜನೆ ಎಂದು ಪರಿವರ್ತಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ದೇಶದ ಬಡವರು, ಕಾರ್ಮಿಕರಿಗೆ ಅನುಕೂಲ ಆಗಬೇಕೆಂದು ಈ ಕಾಯ್ದೆ ತಂದಿದ್ದಾರೆ. ಇದರ ಕುರಿತು ಚರ್ಚಿಸುವ ನೆಪದಲ್ಲಿ ವಿಶೇಷ ಅಧಿವೇಶನವನ್ನು ಕರೆದು ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ಸಾಧಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಶಾಸನಸಭೆಯ ಪಾವಿತ್ರ್ಯವನ್ನು ಹಾಳು ಮಾಡುವಂಥ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಯಾವ ಸದನದಲ್ಲಿ ಈ ನಾಡಿನ ಜನರ ಒಳಿತು, ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಆಗಬೇಕಿತ್ತೋ ಅದನ್ನು ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟುವುದಕ್ಕೆ ಬಳಸುತ್ತಿರುವುದನ್ನು ಖಂಡನೀಯ. ನಾಡಿನ ಹಿತವನ್ನು ಮರೆತು ಪದೇ ಪದೇ ಕೇಂದ್ರ ಸರ್ಕಾರದ ವಿರುದ್ಧ ವಿಷ ಕಾರುವ ಸಿಎಂ ಸಿದ್ದರಾಮಯ್ಯನವರು, ಈ ರಾಜ್ಯದ ಒಳಿತಿನ ಕುರಿತು ಚಿಂತನೆ ಮಾಡದೇ ಜನರನ್ನು ಎತ್ತಿಕಟ್ಟುವ ಕಾರ್ಯದಲ್ಲಿ ಕಳೆದ ಎರಡೂವರೆ ವರ್ಷ ಕಳೆದಿದ್ದಾರೆ ಎಂದರು.

ರಾಜ್ಯಕ್ಕೆ ಎಚ್‌ಡಿಕೆ ಕೊಡುಗೆ ಅಪಾರ

ರಾಜ್ಯ ರಾಜಕಾರಣಕ್ಕೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಯವರು ಆಗಮಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಬರುವುದರಲ್ಲಿ ತಪ್ಪೇನಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಕುರ್ಚಿ ಉಳಿಸಿಕೊಳ್ಳಲು ಚಾಣಾಕ್ಷ ನಡೆ

ತಮ್ಮ ಅಧಿಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯನವರು ಚಾಣಾಕ್ಷ ನಡೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುವುದು ಆದ್ಯತೆಯಾಗಿದೆ. ಕಾಲಹರಣ ಮಾಡಲು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೈ ಕೊಡಲು ವಿಶೇಷ ಅಧಿವೇಶನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಾಧನೆ ಕುರಿತಂತೆ ಚರ್ಚೆಗೆ ಆಹ್ವಾನ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಸಿಎಂ ಸಿದ್ದರಾಮಯ್ಯ ನೀವೇನು ಸಾಧನೆ ಮಾಡಿದ್ದೀರಿ? ಯಾವ ಜನಪರ ಯೋಜನೆಗಳನ್ನೇನು ಕೊಟ್ಟಿದ್ದೀರಿ ಎಂಬುದರ ಬಗ್ಗೆ ಚರ್ಚೆಗೆ ಬನ್ನಿ ಎಂದು ಆಹ್ವಾನ ನೀಡಿದರು.

ಮೈತ್ರಿಯಲ್ಲಿ ಗೊಂದಲವಿಲ್ಲ

ಮೂಡಾ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸೇರಿ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುವಾಗ ಕೆಲವು ಗೊಂದಲಗಳಿಗೆ ಕಾರಣವಾಗಿತ್ತು. ಈ ರೀತಿ ಗೊಂದಲಕ್ಕೆ ಮುಂದಿನ ದಿನಗಳಲ್ಲಿ ಅವಕಾಶ ಕೊಡುವುದಿಲ್ಲ. ರಾಜ್ಯದ ಬಿಜೆಪಿ ಅಧ್ಯಕ್ಷನಾಗಿ ಏನೇ ತೀರ್ಮಾನವಾದರೂ ವರಿಷ್ಠರ ಗಮನಕ್ಕೆ ತಂದು ನಿರ್ಧರಿಸಬೇಕಾಗುತ್ತದೆ. ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದ್ದೇನೆ. ಅವರ ಅಭಿಪ್ರಾಯಗಳನ್ನು ಕೇಂದ್ರದ ವರಿಷ್ಠರಿಗೆ ತಿಳಿಸಿದ್ದೇನೆ ಎಂದು ತಿಳಿಸಿದರು.

Read More
Next Story