
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಕೆಪಿಎಸ್‌ಸಿ ಅವಾಂತರದ ಕುರಿತು ಅಭ್ಯರ್ಥಿಗಳು ಮನವಿ ಸಲ್ಲಿಸಿದರು.
KPSC Controversy : ಕೆಪಿಎಸ್‌ಸಿ ಆಕಾಂಕ್ಷಿಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ
ಕೆಪಿಎಸ್‌ಸಿ ನಡೆಸಿದ ಪೂರ್ವಭಾವಿ ಮರುಪರೀಕ್ಷೆಯಲ್ಲಿ 79ಕ್ಕೂ ಹೆಚ್ಚು ತಪ್ಪುಗಳಾಗಿದ್ದವು. ಕೆಎಟಿ ಹಾಗೂ ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ್ದ 295 ಅಭ್ಯರ್ಥಿಗಳಿಗೆ ಮಾತ್ರ ಮುಖ್ಯಪರೀಕ್ಷೆಗೆ ಅವಕಾಶ ನೀಡಿದೆ.
ಕೆಪಿಎಸ್‌ಸಿ ಮರು ಪರೀಕ್ಷೆಯಲ್ಲೂ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಪರೀಕ್ಷಾರ್ಥಿಗಳು ಗುರುವಾರ (ಮೇ ೮) ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ವಿವರಿಸಿದ್ದಾರೆ.
ಕೆಪಿಎಸ್‌ಸಿ ನಡೆಸಿದ ಪೂರ್ವಭಾವಿ ಮರುಪರೀಕ್ಷೆಯಲ್ಲಿ 79ಕ್ಕೂ ಹೆಚ್ಚು ತಪ್ಪುಗಳಿದ್ದವು. ಈ ಹಿನ್ನೆಲೆಯಲ್ಲಿ ಕೆಎಟಿ ಮತ್ತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ 295 ಅಭ್ಯರ್ಥಿಗಳಿಗೆ ಮಾತ್ರ ಮುಖ್ಯಪರೀಕ್ಷೆಗೆ ಅವಕಾಶ ನೀಡಲಾಗಿತ್ತು. ಇದರಿಂದಾಗಿ 70,000ಕ್ಕೂ ಅಧಿಕ ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿಗಳು ಮುಖ್ಯಪರೀಕ್ಷೆಯಿಂದ ವಂಚಿತರಾಗಿದ್ದು, ಕೆಪಿಎಸ್‌ಸಿ ತಮ್ಮ ಕನಸುಗಳನ್ನು ಭಗ್ನಗೊಳಿಸಿದೆ ಎಂದು ಅಭ್ಯರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಮೇ 3 ರಿಂದ 9 ರವರೆಗೆ ಕೆಎಎಸ್ ಮುಖ್ಯಪರೀಕ್ಷೆ ನಡೆಯುತ್ತಿದೆ. ಆದರೆ ಬೆಂಗಳೂರಿನ ಕಸ್ತೂರಬಾ ನಗರದ ಬಿಬಿಎಂಪಿ ಸಂಯುಕ್ತ ಪಿಯು ಕಾಲೇಜಿನಲ್ಲಿ ಮೇ 3 ರಂದು ನಡೆದ ಪ್ರಬಂಧ ಪತ್ರಿಕೆಯ ಕಟ್ಟು ನಿಗದಿತ ಸಮಯಕ್ಕೂ ಮುಂಚೆಯೇ ತೆರೆದಿತ್ತು. ಇದನ್ನು ವಿರೋಧಿಸಿದ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲು ನಿರಾಕರಿಸಿದ್ದರು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ವ್ಯಕ್ತಪಡಿಸಿದ್ದರು. ಈ ವೇಳೆ ಪ್ರಶ್ನಿಸಿದ ಅಭ್ಯರ್ಥಿಗಳನ್ನು ಕೆಪಿಎಸ್‌ಸಿ ಅಧಿಕಾರಿಗಳು ನಿಂದಿಸಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಅಭ್ಯರ್ಥಿಗಳು ಕೆಪಿಎಸ್‌ಸಿ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಈ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದ್ದ ಕೆಪಿಎಸ್‌ಸಿ, ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ ಕಟ್ಟಿನ ಒಳಭಾಗ ಹರಿದಿರುವ ಸಾಧ್ಯತೆ ಇದೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ತಿಳಿಸಿತ್ತು. ಅಭ್ಯರ್ಥಿಗಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಅದು ಮನವಿ ಮಾಡಿತ್ತು.
ಹುಸಿಯಾದ ಸಿಎಂ ಭರವಸೆ
2024 ರ ಫೆಬ್ರವರಿ 27 ರಂದು 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್‌ಸಿ, ಆಗಸ್ಟ್ 27 ರಂದು ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ ಎರಡೂ ಪ್ರಶ್ನೆ ಪತ್ರಿಕೆಗಳಲ್ಲಿ 70 ಕ್ಕೂ ಹೆಚ್ಚು ಪ್ರಶ್ನೆಗಳು ಭಾಷಾಂತರ ದೋಷಗಳಿಂದ ಕೂಡಿದ್ದವು. ಇದರಿಂದ ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಅರ್ಥಮಾಡಿಕೊಳ್ಳುವುದೇ ಕಷ್ಟವಾಗಿತ್ತು. ಈ ಭಾಷಾಂತರ ದೋಷದ ವಿರುದ್ಧ ಹಿರಿಯ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಮತ್ತು ವಿದ್ಯಾರ್ಥಿಗಳು ಹೋರಾಟ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರುಪರೀಕ್ಷೆಗೆ ಆದೇಶಿಸಿದ್ದರು.
ಆದರೆ, ಕೆಪಿಎಸ್‌ಸಿ ಡಿಸೆಂಬರ್ 29ರಂದು ನಡೆಸಿದ ಮರುಪರೀಕ್ಷೆಯಲ್ಲೂ ಎರಡು ಪ್ರಶ್ನೆ ಪತ್ರಿಕೆಗಳಲ್ಲಿ 79 ಪ್ರಶ್ನೆಗಳು ಭಾಷಾಂತರ ದೋಷಗಳು ಕಂಡು ಬಂದಿದ್ದವು. ಈ ಕುರಿತು ಕನ್ನಡಪರ ಸಂಘಟನೆಗಳು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ವಿಧಾನಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆದು ಅನ್ಯಾಯ ಸರಿಪಡಿಸುವುದಾಗಿ ಭರವಸೆ ನೀಡಿದ್ದರು.
ಬಿ.ವೈ. ವಿಜಯೇಂದ್ರ ಅವರನ್ನು ಭೇಟಿಯಾದ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಉಪಸ್ಥಿತರಿದ್ದರು.