
ಸಾಂದರ್ಭಿಕ ಚಿತ್ರ
ಧರ್ಮಸ್ಥಳದಲ್ಲಿನ ಹತ್ಯೆ, ಅತ್ಯಾಚಾರ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಲು ವಕೀಲರ ಮನವಿ
ಎಡಿಜಿಪಿ ಮಟ್ಟದ ಪೊಲೀಸ್ ಅಧಿಕಾರಿ ಮತ್ತು ಹೈಕೋರ್ಟ್ ನಿವೃತ್ತ ಅಥವಾ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಮೇಲ್ವಿಚಾರಣೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯನವರ ಬಳಿ ವಕೀಲರ ನಿಯೋಗ ಮನವಿ ಮಾಡಲಿದೆ.
ಧರ್ಮಸ್ಥಳದಲ್ಲಿ ನಡೆದ ಕೆಲವು ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆಯಲ್ಲಿ ಸ್ಥಳೀಯ ಪೊಲೀಸರಿಗೆ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯವಾಗದ ಕಾರಣ, ಹೈಕೋರ್ಟ್ ವಕೀಲರ ನಿಯೋಗವು ಬುಧವಾರ (ಜುಲೈ 16) ಮಧ್ಯಾಹ್ನ 3.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಲಿದೆ. ಈ ವೇಳೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಮನವಿ ಸಲ್ಲಿಕೆಯಾಗಲಿದೆ.
ಅಪರಿಚಿತ ವ್ಯಕ್ತಿಯೊಬ್ಬರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರೂ, ಈ ಪ್ರಕರಣಗಳಲ್ಲಿ ಸರಿಯಾದ ತನಿಖೆ ನಡೆಯುತ್ತಿಲ್ಲ ಎಂಬುದನ್ನು ವಕೀಲರ ನಿಯೋಗವು ಮುಖ್ಯಮಂತ್ರಿಯವರಿಗೆಮನವರಿಕೆ ಮಾಡಿಕೊಡಲಿದೆ. ಈ ನಿಟ್ಟಿನಲ್ಲಿ, ಎಡಿಜಿಪಿ ಮಟ್ಟದ ಪೊಲೀಸ್ ಅಧಿಕಾರಿ ಮತ್ತು ಹೈಕೋರ್ಟ್‌ನ ನಿವೃತ್ತ ಅಥವಾ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯ ಮೇಲ್ವಿಚಾರಣೆ ನಡೆಸಬೇಕು. ಡಿಜಿಟಲ್ ವಿಧಿವಿಜ್ಞಾನ ಮತ್ತು ವಿಡಿಯೋ ರೆಕಾರ್ಡಿಂಗ್ ನಡೆಸಬೇಕು ಎಂದು ನಿಯೋಗವು ಒತ್ತಾಯಿಸಲಿದೆ.
ಮಹಿಳಾ ಆಯೋಗದಿಂದಲೂ ಮನವಿ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕೂಡ ಮುಖ್ಯಮಂತ್ರಿಯವರಿಗೆ ಪತ್ರ ಬರೆದು, ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಕೋರಿದ್ದರು.
ಈ ನಡುವೆ, ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿವೆ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ವ್ಯಕ್ತಿಯೊಬ್ಬರು ಕಳೆದ ವಾರ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹಾಜರಾಗಿ, ತಾವೇ ಹೊರತೆಗೆದಿರುವುದಾಗಿ ತಿಳಿಸಿದ್ದ ಅಸ್ಥಿಪಂಜರದ ಅವಶೇಷಗಳನ್ನು ಪ್ರಸ್ತುತಪಡಿಸಿದ್ದರು.
ಪ್ರಕರಣದ ಗಂಭೀರತೆಯನ್ನು ಗಮನಿಸಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದರು.
ಹೈಕೋರ್ಟ್ ವಕೀಲರ ನಿಯೋಗವು ಮುಖ್ಯಮಂತ್ರಿಯನ್ನು ಭೇಟಿಯಾಗಿ ಎಸ್‌ಐಟಿ ರಚಿಸಲು ಮನವಿ ಸಲ್ಲಿಸುವುದರಿಂದ, ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆದಿವೆ ಎನ್ನಲಾದ ಮತ್ತಷ್ಟು ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.