
ಸಚಿವ ಎಂ.ಬಿ. ಪಾಟೀಲ್
ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ, ಎಲ್ಲವೂ ಹೈಕಮಾಂಡ್ ನಿರ್ಧಾರ: ಎಂ.ಬಿ. ಪಾಟೀಲ್
ಪಕ್ಷದಲ್ಲಿ ಸಮುದಾಯವಾರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬೇಡಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, "ಆ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲವೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗುವ ವಿಚಾರಗಳು" ಎಂದು ಜಾರಿಕೊಂಡರು.
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಚಿವರು ಅವರ ಬೆನ್ನಿಗೆ ನಿಂತಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಬೆನ್ನಲ್ಲೇ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು, "ನಾಯಕತ್ವ ಬದಲಾವಣೆಯ ವಿಷಯವೇ ಅಪ್ರಸ್ತುತ" ಎಂದು ಹೇಳಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, "ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ. ಒಂದು ವೇಳೆ ಸಂಪುಟ ಪುನಾರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವುದಿದ್ದರೂ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನಿಸುತ್ತದೆ" ಎಂದು ಸ್ಪಷ್ಟಪಡಿಸಿದರು.
"ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿರ್ಣಯವೇ ಅಂತಿಮವಾಗಿರುತ್ತದೆ" ಎಂದು ಅವರು ಹೇಳಿದರು.
ಸಮುದಾಯವಾರು ಡಿಸಿಎಂ ಬಗ್ಗೆ ತಿಳಿದಿಲ್ಲ
ಪಕ್ಷದಲ್ಲಿ ಸಮುದಾಯವಾರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬೇಡಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, "ಆ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲವೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗುವ ವಿಚಾರಗಳು" ಎಂದು ಜಾರಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅವರು ಪಕ್ಷದ ವರಿಷ್ಠರನ್ನೂ ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತಾದ ಚರ್ಚೆಗಳು ಮತ್ತೆ ಗರಿಗೆದರಿದ್ದು, ಎಂ.ಬಿ. ಪಾಟೀಲ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

