GST Discrimination | ತೆರಿಗೆ ಅನ್ಯಾಯದ ವಿರುದ್ಧ ಬಿಜೆಪಿ ಸಂಸದರು ದನಿ ಎತ್ತಲಿ: ಸಿಎಂ ಸವಾಲು
ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ. ತೆರಿಗೆ ಪಾಲು ಬಂದಿದ್ದು, ರಾಜ್ಯಕ್ಕೆ ಅನ್ಯಾಯವಾಗಿದೆ. ಇದರ ವಿರುದ್ಧ ಬಿಜೆಪಿ ಸಂಸದರು ದನಿ ಎತ್ತಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಆದರೂ ರಾಜ್ಯದ ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಅವರು ಭಾನುವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. 31000 ಕೋಟಿಗೂ ಹೆಚ್ಚು ಉತ್ತರಪ್ರದೇಶ ರಾಜ್ಯವೊಂದಕ್ಕೆ ನೀಡಿ ಕರ್ನಾಟಕಕ್ಕೆ ಅನ್ಯಾಯ ಎಸಗಲಾಗಿದೆ ಎಂದರು.
ಅದ್ದೂರಿ ದಸರಾ ಆಚರಣೆ
ಈ ವರ್ಷ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ದಸರಾ ಉತ್ಸವ ಯಶಸ್ವಿಯಾಗಲು ಕಾರಣರಾದ ಜಿಲ್ಲಾ ಮಂತ್ರಿಗಳು ಹಾಗೂ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.
ರಾಜ್ಯದಲ್ಲಿ ಸಾಕಷ್ಟು ಮಳೆ-ಬೆಳೆಯಾಗಿದ್ದರಿಂದ ಈ ಬಾರಿ ನಾಡ ಹಬ್ಬ ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಜನರು ದಸರಾದಲ್ಲಿ ಸಂತೋಷದಿಂದ ಭಾಗವಹಿಸಿದ್ದು, ಸರ್ಕಾರದ ಶ್ರಮ ಸಾರ್ಥಕವಾಗಿದೆ ಎಂದು ತಿಳಿಸಿದರು.
ಬಿಜೆಪಿ ಹೋರಾಟಕ್ಕೆ ಪ್ರತಿಕ್ರಿಯೆ
ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಗರು ಹೋರಾಟ ಹಮ್ಮಿಕೊಳ್ಳಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟ ಉಪಸಮಿತಿಯು ನಿರ್ಧಾರ ಕೈಗೊಂಡಿದ್ದು, ನ್ಯಾಯಾಲಯಕ್ಕೆ ಮಂಡಿಸಿದ ನಂತರವಷ್ಟೇ ಪ್ರಕರಣ ವಾಪಸ್ಸು ಪಡೆಯಲು ಸಾಧ್ಯ ಎಂದು ತಿಳಿಸಿದರು.