Lok Sabha Elections: 2ನೇ ಹಂತದ ಚುನಾವಣೆ; 337 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
x
ಎರಡನೇ ಹಂತದ ಚುನಾವಣೆ

Lok Sabha Elections: 2ನೇ ಹಂತದ ಚುನಾವಣೆ; 337 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಶುಕ್ರವಾರ ಅಂತ್ಯವಾಗಿದೆ. ಶನಿವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.


ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ 337 ಅಭ್ಯರ್ಥಿಗಳಿಂದ 503 ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಸಲು ಶುಕ್ರವಾರ (ಏಪ್ರಿಲ್ 19) ಕೊನೆಯ ದಿನವಾಗಿತ್ತು.

ಈ ನಾಮಪತ್ರಗಳ ಪರಿಶೀಲನೆಯು ಶನಿವಾರ (ಏಪ್ರಿಲ್ 20)ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯುವುದಕ್ಕೆ ಏಪ್ರಿಲ್ 22 ಕೊನೆಯ ದಿನವಾಗಿದ್ದು, ಈ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದೆ. ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿದ್ದ ಪ್ರಮುಖ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್ ಈಶ್ವರಪ್ಪ, ರಾಯಚೂರಿನಲ್ಲಿ ಬಿ.ವಿ. ನಾಯಕ, ದಾವಣಗೆರೆಯಲ್ಲಿ ವಿನಯ್‌ಕುಮಾರ್‌ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.



ನೇರ ಹಣಾಹಣಿ; ತ್ರಿಕೋನ ಸ್ಪರ್ಧೆ

ಎರಡನೇ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೊಂದಿಗೆ ನೇರ ಹಣಾಹಣಿ ಇದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಇರುವುದರಿಂದ ಈ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ, ಬಿಜೆಪಿಗೆ ಬೆಂಬಲ ಸೂಚಿಸಿದೆ. ಹೀಗಾಗಿ, ಈ ಬಾರಿ ಎಲ್ಲಾ 14 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿ ಇದೆ. ಆದರೆ, ಈ ಬಾರಿ ಹಲವು ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆಯೂ ಇರುವುದರಿಂದ ಚುನಾವಣಾ ಕಣ ಯಾವ ರೀತಿ ಬದಲಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು

2ನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರಗಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಹಾವೇರಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಲೋಕಸಭೆ ಚುನಾವಣೆ ನಡೆಯಲಿದೆ.

Read More
Next Story