
ಸ್ನೇಹಮಯಿ ಕೃಷ್ಣಾ
Mysore MUDA Case | ಲೋಕಾಯುಕ್ತ ತನಿಖಾ ವರದಿ ಕೋರ್ಟ್ಗೆ ಸಲ್ಲಿಕೆಯಾಗದಿದ್ದರೆ ಸಿಎಂಗೆ ಮತ್ತೊಂದು ತೊಂದರೆ
ಮೇ 7 ರಂದು ಲೋಕಾಯುಕ್ತ ಅಧಿಕಾರಿಗಳು ಅಂತಿಮ ವರದಿ ಸಲ್ಲಿಸದೇ ಹೋದರೆ ಆರೋಪ ಸಾಬೀತಿಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ಮುಂದುವರಿದ ತನಿಖೆಯ ವರದಿ ನಾಳೆ (ಮೇ 7)ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಕಳೆದ ಜನವರಿ ತಿಂಗಳಲ್ಲಿ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದರು. ವರದಿಯಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ನಾಲ್ವರಿಗೆ ಕ್ಲಿನ್ ಚಿಟ್ ನೀಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ಕುರಿತು ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ ಪರಿಣಾಮ ತನಿಖೆ ಮುಂದುವರಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಮೇ 7ರೊಳಗೆ ಅಂತಿಮ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಲಾಗಿತ್ತು.
ಮೇ 7 ರಂದು ಲೋಕಾಯುಕ್ತ ಅಧಿಕಾರಿಗಳು ಅಂತಿಮ ವರದಿ ಸಲ್ಲಿಸದೇ ಅನವಶ್ಯಕ ವಿಳಂಬ ಮಾಡಿದರೆ ಅಥವಾ ಅಂತಿಮ ವರದಿ ಸಲ್ಲಿಕೆಗೆ ಮತ್ತೆ ಕಾಲಾವಕಾಶ ಕೇಳಿದರೆ, ಇಲ್ಲವೇ 1 ರಿಂದ 4ನೇ ಆರೋಪಿಗಳ ವಿರುದ್ದ ಯಾವುದೇ ಆರೋಪ ಸಾಬೀತಾಗಿಲ್ಲ ಎಂದು ಹೇಳಿದರೆ ಆರೋಪ ಸಾಬೀತು ಪಡಿಸಲು ಅವಕಾಶ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಸಿಎಂ ಸೇರಿ ನಾಲ್ವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ ಎಂದು ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಹೇಳಿರುವುದರಿಂದ ಮುಂದುವರೆದ ತನಿಖೆಯಲ್ಲೂ ಅದು ಪುನರಾವರ್ತನೆಯಾಗುವ ಸಾಧ್ಯತೆ ಇದೆ. ಅನಾವಶ್ಯಕವಾಗಿ ವಿಳಂಬ ಮಾಡಲು ಅವಕಾಶ ನೀಡದೆ, ಹಾಲಿ ಲಭ್ಯವಿರುವ ದಾಖಲೆಗಳನ್ನು ಆಧರಿಸಿ 1ರಿಂದ 4 ನೇ ಆರೋಪಿಗಳ ವಿರುದ್ಧ ಆರೋಪ ಸಾಬೀತು ಪಡಿಸಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ಅವರು ದ ಫೆಡರಲ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
ದೂರುದಾರರ ನಿರ್ಧಾರದಿಂದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಏನೇ ವರದಿ ಸಲ್ಲಿಸಿದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಲಿದೆ ಎನ್ನಲಾಗಿದೆ.