
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್: ರಾಜ್ಯದ ವಿವಿಧೆಡೆ ಭರ್ಜರಿ ಕಾರ್ಯಾಚರಣೆ
ಮಂಗಳವಾರ ಬೆಳ್ಳಂಬೆಳಗ್ಗೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರದ ವಿರುದ್ಧ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಪ್ರಮುಖ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಇಂದು (ಮಂಗಳವಾರ) ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಒಟ್ಟು ನಾಲ್ವರು ಪ್ರಭಾವಿ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಈ ಕಾರ್ಯಾಚರಣೆ ನಡೆದಿದೆ. ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ಚಳಿ ಬಿಡಿಸಿದ್ದಾರೆ.
ಭ್ರಷ್ಟಾಚಾರದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಗಲೆಗಳು, ಮನೆಗಳು ಹಾಗೂ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್‌ನ ಸಹಾಯಕ ಕಾರ್ಯದರ್ಶಿಯಾಗಿರುವ ಶ್ಯಾಂ ಸುಂದರ್ ಕಾಂಬಳೆ ಅವರಿಗೆ ಸೇರಿದ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಾಗಲಕೋಟೆ ಹಾಗೂ ಗದಗ ಜಿಲ್ಲೆಯ ನರಗುಂದದಲ್ಲಿರುವ ಇವರ ಮನೆಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆದಿದೆ. ಆದಾಯಕ್ಕೂ ಮೀರಿ ಆಸ್ತಿ ಹೊಂದಿರುವ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದಾಪುರ ಕೋಲಾ ಶಿರಸಿ ಗುಂಪು ಗ್ರಾಮ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಮಾರುತಿ ಯಶವಂತ್ ಮಾಳವಿ ಅವರ ನಿವಾಸದ ಮೇಲೂ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಇನ್ನು ರಾಯಚೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಜಯಲಕ್ಷ್ಮಿ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್‌ಪಿಗಳ ಮಾರ್ಗದರ್ಶನದಲ್ಲಿ ಹತ್ತಾರು ಅಧಿಕಾರಿಗಳ ತಂಡ ಪಾಲ್ಗೊಂಡಿದೆ. ದಾಳಿಯ ವೇಳೆ ನಗದು, ಚಿನ್ನಾಭರಣ ಹಾಗೂ ಸ್ಥಿರ ಮತ್ತು ಚರಾಸ್ತಿಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಪರಿಶೀಲನೆ ಪೂರ್ಣಗೊಂಡ ನಂತರ ಲೋಕಾಯುಕ್ತ ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಲಿದೆ.

