ವಾಲ್ಮೀಕಿ ಹಗರಣ| ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು ಮಂಜೂರು
x

ವಾಲ್ಮೀಕಿ ಹಗರಣ| ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು ಮಂಜೂರು

ನಾಗೇಂದ್ರ ಮತ್ತು ನೆಕ್ಕಂಟಿ ನಾಗರಾಜ್ ನಡುವಿನ ವ್ಯವಹಾರ ಅವರ ವೈಯಕ್ತಿಕ. ಸಿಬಿಐ ಹೇಳುತ್ತಿರುವ ಟೆಂಡರ್‌ಗೂ, ನಿಗಮದ ವ್ಯವಹಾರಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ನಾಗೇಂದ್ರ ಪರ ವಕೀಲರು ವಾದಿಸಿದ್ದರು.


ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಕೋಟ್ಯಂತರ ರೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್‌ ರಿಲೀಫ್‌ ನೀಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ಆರೋಪಿತ ಶಾಸಕ ಬಿ. ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದ ಬಳಿಕ ಬಿ.ನಾಗೇಂದ್ರ ಅವರಿಗೆ ಬಂಧನ ಭೀತಿ ಎದುರಾಗಿತ್ತು. ಬಂಧನದಿಂದ ತಪ್ಪಿಸಿಕೊಳ್ಳಲು ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ (ಜ.13) ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಬುಧವಾರಕ್ಕೆ ಆದೇಶ ಕಾಯ್ದಿರಿಸಿತ್ತು. ಇಂದು (ಜ.14) ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬಿ. ನಾಗೇಂದ್ರ ಪರ ಹಿರಿಯ ವಕೀಲ ಗೌತಮ್ ನೆತ್ತರು ವಾದ ಮಂಡಿಸಿದರು. ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧದ ಆರೋಪಗಳು ಪ್ರಾಥಮಿಕ ಹಂತದಲ್ಲಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಹಾಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ವಕೀಲರು ನ್ಯಾಯಾಲಯವನ್ನು ಕೋರಿದ್ದರು.

ವಾದ ಮಂಡಿಸಿದ್ದ ತನಿಖಾಧಿಕಾರಿ

ಮಂಗಳವಾರ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿದ್ದ ನಿರೀಕ್ಷಣಾ ಜಾಮೀನು ಕೋರಿದ ಅರ್ಜಿಗೆ ತನಿಖಾಧಿಕಾರಿ ಆಕ್ಷೇಪ ಸಲ್ಲಿಸಿದ್ದರು. ಅಲ್ಲದೇ ತಾವೇ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ್ದರು. ವಾಲ್ಮೀಕಿ ಹಗರಣದಲ್ಲಿ ಹಣ ಪಡೆದವರನ್ನು ಸಿಐಡಿ ಹಾಗೂ ಜಾರಿ ನಿರ್ದೇಶನಾಲಯ ತನಿಖೆ ಮಾಡಿದೆ. ಫಲಾನುಭವಿಗಳನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ತನಿಖೆಯ ಮಾಹಿತಿಗಳನ್ನು ತೆರೆದ ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲೂ ದಾಳಿ ನಡೆಸಿ ಮಾಹಿತಿ ಕಲೆ ಹಾಕಲಾಗಿದೆ. ನಿಗಮದ ಹಣವನ್ನು ಚಿನ್ನ ಹಾಗೂ ಬುಲಿಯನ್ ಆಗಿ ಕನ್ವರ್ಟ್ ಮಾಡಲಾಗಿದೆ. ಇದರ ಹಿಂದೆ ಮಾಜಿ ಸಚಿವ ಬಿ. ನಾಗೇಂದ್ರ, ಅವರ ಸಹಚರರು ಇದ್ದಾರೆ. ಕೆಲ ಬೋಗಸ್ ಕಂಪನಿಗಳೂ ಇವೆ ಎಂದು ಹೇಳಿ ನ್ಯಾಯಾಲಯದ ಮುಂದೆ ಎರಡು ಸೂಟ್‌ಕೇಸ್ ದಾಖಲೆಗಳನ್ನು ಪ್ರದರ್ಶಿಸಿದ್ದರು.

ನಾಗೇಂದ್ರ ಪರ ವಾದ ಮಂಡನೆ ಮಾಡಿದ ಗೌತಮ್‌ ನೆತ್ತಾರು ಅವರು, ನಾಗೇಂದ್ರ ಮತ್ತು ನೆಕ್ಕಂಟಿ ನಾಗರಾಜ್ ನಡುವಿನ ವ್ಯವಹಾರ ಅವರ ವೈಯಕ್ತಿಕ. ಸಿಬಿಐ ಹೇಳುತ್ತಿರುವ ಟೆಂಡರ್‌ಗೂ, ನಿಗಮದ ವ್ಯವಹಾರಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರಿಸಿದ್ದ ಕೋಟ್ಯಂತರ ರೂ. ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಲಾಗಿದೆ ಎಂಬ ಆರೋಪದಡಿ ನಾಗೇಂದ್ರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪದ ಬಳಿಕ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದರು.

Read More
Next Story