ಪ್ರೊ. ಜಿ.ಬಿ. ಶಿವರಾಜು, ಗಾಂಧಿ ಗ್ರಾಮೀಣ ಗುರುಕುಲ ಶಾಲೆಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯ ಮುಕುಟ
x

ಪ್ರೊ. ಜಿ.ಬಿ. ಶಿವರಾಜು, ಗಾಂಧಿ ಗ್ರಾಮೀಣ ಗುರುಕುಲ ಶಾಲೆಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯ ಮುಕುಟ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ 2014 ರಲ್ಲಿ ಕರ್ನಾಟಕ ಗಾಂಧಿ ಸೇವಾ ಪ್ರಶಸ್ತಿ ಸ್ಥಾಪಿಸಿದೆ.


ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಆಯ್ಕೆಯಾಗಿವೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ 2014 ರಲ್ಲಿ ಕರ್ನಾಟಕ ಗಾಂಧಿ ಸೇವಾ ಪ್ರಶಸ್ತಿ ಸ್ಥಾಪಿಸಿದೆ.

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯು ಪ್ರಶಸ್ತಿ ಫಲಕ ಹಾಗೂ ರೂ.5 ಲಕ್ಷ ನಗದು ಒಳಗೊಂಡಿದೆ. 2023 ರವರೆಗೆ 8 ಮಂದಿ ವ್ಯಕ್ತಿಗಳು ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2024ನೇ ಸಾಲಿನ ಪ್ರಶಸ್ತಿಯು ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಗಿಟ್ಟಿಗೆರೆ ಗ್ರಾಮದ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಅವರು ಮತ್ತು ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ವಿಂಗಡಿಸಿ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಮೊತ್ತವನ್ನು ತಲಾ ರೂ.2.5 ಲಕ್ಷಗಳಂತೆ ಸಮನಾಗಿ ನೀಡಿ ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ಅ.2 ರ ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತ ಸನತ್ಕುಮಾರ್ ಬೆಳಗಲಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ವೂಡೆ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಸದಸ್ಯರಾಗಿದ್ದರು.

ಪ್ರಶಸ್ತಿ ಪುರಸ್ಕೃತರ ಸಾಧನೆ

ಪ್ರೊ. ಜಿ.ಬಿ. ಶಿವರಾಜು ಅವರು ನಿವೃತ್ತ ಉಪನ್ಯಾಸಕರು. ತಮ್ಮ ವೃತ್ತಿ ಜೀವನದುದ್ದಕ್ಕೂ ವಿದ್ಯಾರ್ಥಿಗಳಲ್ಲಿ ಗಾಂಧಿ ವಿಚಾರಧಾರೆಯನ್ನು ಬಿತ್ತುವಲ್ಲಿ ಶ್ರಮಿಸಿದ್ದಾರೆ. 73 ವರ್ಷದ ಶಿವರಾಜು ಅವರು ತಮ್ಮ ನಿವೃತ್ತಿ ವೇತನವನ್ನು ಗಾಂಧಿ ವಿಚಾರಗಳನ್ನು ಯುವ ಜನರಿಗೆ ತಲುಪಿಸಲು ವಿನಿಯೋಗಿಸುತ್ತಿದ್ದಾರೆ. ಗಾಂಧಿ ಪ್ರಣೀತ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮದ್ಯಪಾನ ಸಂಯಮ ಮಂಡಳಿಗಳ ಸಮನ್ವಯದ ಮೂಲಕ ಗಾಂಧಿ ವಿಚಾರಗಳನ್ನು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಅರಸೀಕೆರೆಯಲ್ಲಿನ ಕಸ್ತೂರ ಬಾ ಗಾಂಧಿ ಆಶ್ರಮವನ್ನು ಪುನರುಜ್ಜೀವನಗೊಳಿಸಿದ್ದಾರೆ. ಮೂಡಿಗೆರೆಯ ಭಾರತಿ ಬೈಲ್ ಕೇಂದ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆ ಮಾರ್ನೋಮಿದೊಡ್ಡಿ ಗ್ರಾಮದಲ್ಲಿ ಕಸ್ತೂರಬಾ ಗಾಂಧಿ ಟ್ರಸ್ಟ್ನ ಉಪಕೇಂದ್ರವನ್ನು ಸ್ಥಳೀಯರ ಸಹಕಾರದಿಂದ ಗ್ರಾಮೀಣ ಮಹಿಳೆಯರ ಸ್ವ ಉದ್ಯೋಗ ಕಾರ್ಯಾಗಾರವಾಗಿ ಅಭಿವೃದ್ಧಿಪಡಿಸಿದ್ದಾರೆ. ಸಂಸ್ಥೆಯ 20 ಎಕರೆಗೂ ಹೆಚ್ಚು ಭೂಮಿಯಲ್ಲಿ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಸ್ಥಳೀಯರ ಸಹಕಾರದೊಂದಿಗೆ ನಿರ್ವಹಿಸುತ್ತಿದ್ದಾರೆ. ಮೈಸೂರಿನ ಮಾನಸಗಂಗೋತ್ರಿಯಲ್ಲಿ ಸಬರಮತಿ ಮಾದರಿಯ ಆಶ್ರಮ ನಿರ್ಮಾಣ ಮಾಡಿದ್ದಾರೆ. ಗದಗ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿ ಸಬರಮತಿ ಆಶ್ರಮದ ಮಾದರಿಯನ್ನು ನಿರ್ಮಿಸಿ ಗಾಂಧೀಜಿಯವರ ಬದುಕು ಸಾಧನೆಗಳನ್ನು ಯುವಜನರು ಹಾಗೂ ಗ್ರಾಮೀಣ ಭಾಗದ ಜನರಿಗೆ ಆಕರ್ಷಕವಾಗಿ ಅನಾವರಣಗೊಳಿಸಿದ್ದಾರೆ. ಗಾಂಧಿ ಸಾಹಿತ್ಯ ಸಂಘ, ಹರಿಜನ ಸೇವಕ ಸಂಘ ಮೊದಲಾದ ಸಂಸ್ಥೆಗಳನ್ನು ಪುನರಜ್ಜೀವಗೊಳಿಸಿದ್ದಾರೆ.

ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ

1984 ರ ಅ.2 ರಂದು ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದಲ್ಲಿ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನವು ಸ್ಥಾಪಿಸಿದ ಗಾಂಧೀ ಗ್ರಾಮೀಣ ಗುರುಕುಲ ವಸತಿ ಶಾಲೆಯು ಕಳೆದ 39 ವರ್ಷಗಳಿಂದ ಗಾಂಧಿ ವಿಚಾರಗಳನ್ನು ಹೊಸ ಪೀಳಿಗೆಯಲ್ಲಿ ಅಳವಡಿಸಲು ಅಹರ್ನಿಶಿ ದುಡಿಯುತ್ತಿದೆ. ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 5 ರಿಂದ 10 ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಸಮಾಜದ ಎಲ್ಲಾ ವರ್ಗಗಳು ಸೇರಿದಂತೆ ಗ್ರಾಮೀಣ ಕೃಷಿಕ ಹಾಗೂ ಕೂಲಿಕಾರರ ಕುಟುಂಬದ ಹಿನ್ನೆಲೆಯ ಸಾವಿರಾರು ಪ್ರತಿಭಾವಂತ ಮಕ್ಕಳಿಗೆ ಊಟ, ವಸತಿ, ಇತರೆ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ.

ಇಲ್ಲಿನ ವಿದ್ಯಾರ್ಥಿಗಳು ತಾವೇ ನೇಯ್ದ ಬಟ್ಟೆಗಳನ್ನು ಧರಿಸುತ್ತಾರೆ. ತಾವೇ ಬೆಳೆದ ಕೃಷಿ ಬೆಳೆಗಳಿಂದ ತಯಾರಿಸಿದ ಆಹಾರ ಸೇವಿಸುತ್ತಾರೆ. ದೇಶದ ಆಂತರಿಕ ಕಲಹಗಳನ್ನು ಕಿತ್ತೆಸೆಯುವ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಶಿಕ್ಷಣ ಪಡೆಯುತ್ತಿದ್ದಾರೆ. ರಾಜ್ಯ ಪಠ್ಯಕ್ರಮದ ಜೊತೆಗೆ ಗಾಂಧೀ ವಿಚಾರಧಾರೆಯ ಅನುಸಾರ ಕೃಷಿ, ನೂಲು ಮತ್ತು ನೇಯ್ಗೆ, ಹೈನುಗಾರಿಕೆ, ತೋಟಗಾರಿಕೆ ಮುಂತಾದ ಸ್ವಾವಲಂಬಿ, ಪ್ರಾಯೋಗಿಕ ಶಿಕ್ಷಣವನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇಲ್ಲಿ ಶಿಕ್ಷಣ ಪಡೆದ ಹಲವಾರು ವಿದ್ಯಾರ್ಥಿಗಳು ಅತ್ಯುತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯು ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.

Read More
Next Story