ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ
x

ಮಹೇಶ್‌ ಶೆಟ್ಟಿ ತಿಮರೋಡಿ 

ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ

ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿರುವುದನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದರು.


ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಿ.ಎಲ್‌. ಸಂತೋಷ್‌ ವಿರುದ್ಧ ಫೇಸ್‌ಬುಕ್‌ ಖಾತೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ ಪೊಲೀಸ್‌ ಠಾಣೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜೀವ ಕುಲಾಲ್ ಎಂಬುವರು ದೂರು ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ಪೊಲೀಸರು ನೋಟಿಸ್‌ ನೀಡಿದ್ದರೂ ಮಹೇಶ್‌ ತಿಮರೋಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸರು ಗುರುವಾರ ಧರ್ಮಸ್ಥಳದ ಉಜಿರೆಯಲ್ಲಿರುವ ಮಹೇಶ್ ತಿಮರೋಡಿ ನಿವಾಸಕ್ಕೆ ಆಗಮಿಸಿ ವಶಕ್ಕೆ ಪಡೆದು ಠಾಣೆಗೆ ಕರೆದೋಯ್ದಿದ್ದರು.

ಇದಕ್ಕೂ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿರುವುದನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಖಚಿತಪಡಿಸಿದ್ದರು. ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಅದಕ್ಕೆ ಸರಿಯಾದ ಉತ್ತರ ನೀಡದೇ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದರು.

ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯುವ ವೇಳೆ, ತಿಮರೋಡಿ ವಕೀಲರು ಹಾಗೂ ಬೆಂಬಲಿಗರು ಅವರ ಮನೆ ಮುಂದೆ ಜಮಾಯಿಸಿದ್ದರು. ಈ ಸಂದರ್ಭದಲ್ಲಿ, ತಿಮರೋಡಿ ಬೆಂಬಲಿಗರು, ವಕೀಲರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ನಂತರ ಪೊಲೀಸರು ವಶಕ್ಕೆ ಪಡೆದುಕೊಂಡು ತೆರಳುವಾಗ ರೋಷಾವೇಶದಿಂದ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ‘ನನ್ನ ಜೀವಕ್ಕೆ ಏನಾದರೂ ಆದರೆ ಸರ್ಕಾರವೇ ಕಾರಣ. ಏನಾದರೂ ಆದರೆ ಬಿಜೆಪಿ ಅವರೇ ಕಾರಣ’ ಎಂದರು.

ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ಮಟ್ಟಿಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಪ ಅಧಿಕಾರವನ್ನು ಚಲಾಯಿಸಿ ಆ. 21, ಮಧ್ಯಾಹ್ನ 1 ಗಂಟೆಯಿಂದ ಆ. 22 ಮಧ್ಯಾಹ್ನ 1 ಗಂಟೆಯವರೆಗೆ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇದೆ.

Read More
Next Story