
ಸಿದ್ದರಾಮಯ್ಯ-ಡಿಕೆಶಿ ಭಿನ್ನಾಭಿಪ್ರಾಯ ಮರೆಯಲು ಕರೆ: ಸಿಎಂ ಬದಲಾವಣೆ ಚರ್ಚೆಗೆ ಮಲ್ಲಿಕಾರ್ಜುನ ಖರ್ಗೆ ವಿರಾಮ?
ರಾಜ್ಯ ಸರ್ಕಾರವನ್ನು ಬೀಳಿಸಲು ಮೋದಿ- ಶಾ ತಂಡ ಸಿದ್ಧವಿದೆ . ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಾಗಿರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಆ ಮೂಲಕ ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ವಿರಾಮ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಾಗಿರಬೇಕು. ರಾಜ್ಯ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಂಡ ಸಿದ್ಧವಿದೆ ಎಂಬ ಮಾತನ್ನು ಕಾಂಗ್ರೆಸ್ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಆ ಮೂಲಕ ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ವಿರಾಮ ನೀಡಿದ್ದಾರೆ.
ಕಲಬುರಗಿಯಲ್ಲಿ ಬುಧವಾರ ಉದ್ಯೋಗ ಮೇಳದಲ್ಲಿ ಮಾತನಾಡಿದ ಖರ್ಗೆ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಹಾಗೂ ಡಿಸಿಎಂ ಉದ್ದೇಶಿಸಿ ಈ ಮಾತನ್ನು ಹೇಳಿದ್ದಾರೆ. "ರಾಜ್ಯ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಂ ಮುಂದಾಗಿದೆ. ನೀವು ಒಗ್ಗಟ್ಟಾಗಿದ್ದು, ನಿಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗೊತ್ತಿ, ಬಿಜೆಪಿಯ ಈ ಕುತಂತ್ರವನ್ನು ಎದುರಿಸಿ. ನೀವೇ ಕಿತ್ತಾಡಿಕೊಳ್ಳುತ್ತಿದ್ದರೆ ಮೋದಿ-ಶಾ ನಿಮ್ಮ ಸರ್ಕಾರವನ್ನು ಮುಗಿಸುತ್ತಾರೆ, ಹುಷಾರಾಗಿರಿ," ಎಂದು ನೇರವಾಗಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು ಸತ್ಯ. ಬಿಜೆಪಿಯವರು ಸರ್ಕಾರ ಬೀಳಿಸಲು ಪ್ರಯತ್ನ ಮಾಡುತ್ತಿರುವುದೂ ಸತ್ಯ. ಕ್ರಿಮಿನಲ್ ಕೇಸ್‌ಗಳನ್ನು ಹಾಕಿ ಕಾಂಗ್ರೆಸ್ ಕಟ್ಟಿಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನ ಹೊಸ ಕಚೇರಿ ನಿರ್ಮಾಣ ಜಾಗ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಆಗಮಿಸಿದ್ದ ಸುರ್ಜೇವಾಲಾ ಅವರ ಎದುರು ಡಿ.ಕೆ. ಶಿವಕುಮಾರ್ ಅಭಿಮಾನಿಗಳು "ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್," ಎಂದು ಘೋಷಣೆಗಳನ್ನು ಕೂಗಿದರು. ಬಳಿಕ ಮಾಧ್ಯಮದ ಜತೆ ಮಾತನಅಡಿದ ಸುರ್ಜೇವಾಲಾ ಅವರು ಸಿದ್ದರಾಮಯ್ಯ ಮತ್ತು ಡಿಕೆಶಿ ಒಗ್ಗಟ್ಟಾಗಿರಬೇಕೆಂದು ಸೂಚ್ಯವಾಗಿ ಹೇಳಿದರು.
ಇವೆಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ, ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸದ್ಯಕ್ಕೆ ವಿರಾಮ ನೀಡಲಾಗಿದೆ. ಖರ್ಗೆಯವರು ಸಿಎಂ-ಡಿಸಿಎಂ ಒಗ್ಗಟ್ಟಾಗಿರಬೇಕೆಂದು ಹೇಳಿರುವುದರ ಹಿಂದಿನ ಉದ್ದೇಶ ಅದೇ ಆಗಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರಿಯಲಿದ್ದು, ಮುಖ್ಯಮಂತ್ರಿ ಬದಲಾವಣೆ ವಿಷಯದ ಚರ್ಚೆ ನಡೆಸದೆ ಇಬ್ಬರೂ ಒಗ್ಗಟ್ಟಾಗಿರಬೇಕೆಂಬ ಸಂದೇಶವನ್ನು ಅವರು ರವಾನಿಸಿದಂತಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.