Malur Assembly Vote Recount Today
x

ಮಾಲೂರು ಶಾಸಕ ಕೆ.ವೈ. ನಂಜೇಗೌಡ

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ ಇಂದು

2023ರ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು ಬಿಜೆಪಿಯ ಕೆ.ಎಸ್. ಮಂಜುನಾಥಗೌಡ ವಿರುದ್ಧ ಕೇವಲ 248 ಮತಗಳ ಅಂತರದಿಂದ ರೋಚಕ ಜಯ ಸಾಧಿಸಿದ್ದರು.


Click the Play button to hear this message in audio format

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆ ಮಂಗಳವಾರ (ನವೆಂಬರ್ 11) ನಡೆಯಲಿದೆ. ಕಾಂಗ್ರೆಸ್‌ನ ಕೆ.ವೈ. ನಂಜೇಗೌಡ ಅವರ ಗೆಲುವನ್ನು ಪ್ರಶ್ನಿಸಿ ಬಿಜೆಪಿಯ ಕೆ.ಎಸ್. ಮಂಜುನಾಥಗೌಡ ಅವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಆದೇಶದಂತೆ ಈ ಮರು ಎಣಿಕೆ ನಡೆಯುತ್ತಿದೆ.

2023ರ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು ಬಿಜೆಪಿಯ ಕೆ.ಎಸ್. ಮಂಜುನಾಥಗೌಡ ವಿರುದ್ಧ ಕೇವಲ 248 ಮತಗಳ ಅಂತರದಿಂದ ರೋಚಕ ಜಯ ಸಾಧಿಸಿದ್ದರು. ಆದರೆ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಮತ್ತು ಪಾರದರ್ಶಕತೆ ಇರಲಿಲ್ಲ ಎಂದು ಆರೋಪಿಸಿ ಮಂಜುನಾಥಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ನಂಜೇಗೌಡರ ಆಯ್ಕೆಯನ್ನು ಅಸಿಂಧುಗೊಳಿಸಿ, ನಾಲ್ಕು ವಾರಗಳೊಳಗೆ ಮರು ಮತ ಎಣಿಕೆ ನಡೆಸುವಂತೆ ಸೆಪ್ಟೆಂಬರ್‌ನಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ನಂಜೇಗೌಡರಿಗೆ ಶಾಸಕರಾಗಿ ಮುಂದುವರೆಯಲು ಅವಕಾಶ ನೀಡಿತ್ತು, ಆದರೆ ಚುನಾವಣಾ ಆಯೋಗಕ್ಕೆ ಮತಗಳ ಮರು ಎಣಿಕೆ ನಡೆಸಿ, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಅಕ್ಟೋಬರ್ 14ರಂದು ನಿರ್ದೇಶನ ನೀಡಿತ್ತು.

ಮರು ಎಣಿಕೆಗೆ ಸಕಲ ಸಿದ್ಧತೆ

ಸುಪ್ರೀಂ ಕೋರ್ಟ್ ಆದೇಶದಂತೆ, ಕೋಲಾರದ ಟಮಕದಲ್ಲಿರುವ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಇಂದು ಮತಗಳ ಮರು ಎಣಿಕೆ ನಡೆಯಲಿದೆ. ಉಪವಿಭಾಗಾಧಿಕಾರಿ ಡಾ.ಎಚ್.ಪಿ.ಎಸ್. ಮೈತ್ರಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಇವರಿಗೆ ಸಹಾಯ ಮಾಡಲು ಕೋಲಾರ, ಬಂಗಾರಪೇಟೆ, ಶ್ರೀನಿವಾಸಪುರ ಮತ್ತು ಮುಳಬಾಗಿಲು ತಹಸೀಲ್ದಾರ್‌ಗಳನ್ನು ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು ಸಿದ್ಧತೆಗಳನ್ನು ಪರಿಶೀಲಿಸಿದ್ದು, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ಎಣಿಕೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಮರು ಎಣಿಕೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಇಬ್ಬರೂ ನಾಯಕರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. "ಮರು ಎಣಿಕೆಯಲ್ಲಿ ಮಂಜುನಾಥಗೌಡ ಗೆದ್ದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ" ಎಂದು ನಂಜೇಗೌಡರು ಈ ಹಿಂದೆ ಸವಾಲು ಹಾಕಿದ್ದರು.

Read More
Next Story